ಕಾರವಾರ: ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಬೀಚ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ.
ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ :ಡಿ. 31ರ ಸಂಜೆ 4 ಗಂಟೆಯಿಂದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಅವರ ಆದೇಶದಂತೆ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕು ವ್ಯಾಪ್ತಿಯ ಬೀಚ್, ಐತಿಹಾಸಿಕ ಪ್ರದೇಶ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪುಗೂಡುವ ಸಾಧ್ಯತೆ ಇರುವುದರಿಂದ ಕೋವಿಡ್ ಮುಂಜಾಗ್ರತೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ 5 ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಯಾವುದೇ ತೆರೆದ ಸ್ಥಳ, ಪಾರ್ಕ್ ಹಾಗೂ ಇತರ ಮೈದಾನಗಳಲ್ಲಿ ಹಮ್ಮಿಕೊಳ್ಳುವುದು ಮತ್ತು ಕೇಕ್ ಕತ್ತರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.