ಶಿರಸಿ :ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅನರ್ಹ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಸುಮಾರು 23 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ.
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಬಿಜೆಪಿ ಸರ್ಕಾರ ರಚನೆಯಾಗಿದೆ. ಇದರಿಂದ ಅವರ ಋಣ ತೀರಿಸಲು ಸರ್ಕಾರ ಹೆಚ್ಚಿನ ಅನುದಾನ ನೀಡಿದೆ ಎನ್ನಲಾಗುತ್ತಿದೆ. ಅಲ್ಲದೇ ಮುಂದಿನ ಉಪ ಚುನಾವಣೆ ತಯಾರಿಯೂ ಇದಾಗಿದ್ದು, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಮೀಸಲು ಇಡಲಾಗಿದೆ.
23 ಕೋಟಿ !
ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯತ್ ರಸ್ತೆಗಳಿಗೆ 8.85 ಕೋಟಿ ರೂ. ಹಾಗೂ ಎರಡನೇ ಹಂತದಲ್ಲಿ ಲೋಕೋಪಯೋಗಿ ಇಲಾಖೆಗೆ 14.15 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಬನವಾಸಿ ವಲಯದ 6 ಕಾಮಗಾರಿಗೆ 6.90 ಕೋಟಿ ರೂ. ಹಾಗೂ ಯಲ್ಲಾಪುರದ 9 ಕಾಮಗಾರಿಗೆ 7.25ಕೋಟಿ ರೂ. ಮೀಸಲು ಇಡಲಾಗಿದೆ. ಇನ್ನು, ಕಳೆದ ವಾರವಷ್ಟೇ ಜಿಪಂ ರಸ್ತೆಗೆ 8.85 ಕೋಟಿ ನೀಡಿ, ಟೆಂಡರ್ ಹಂತಕ್ಕೆ ಬಂದಿದ್ದು, ಲೋಕೋಪಯೋಗಿ ಇಲಾಖೆಯ ಅನುದಾನಗಳಿಗೂ ಚುನಾವಣೆಯೊಳಗೆ ಟೆಂಡರ್ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.