ಕಾರವಾರ : ಇತ್ತೀಚೆಗೆ ಶಿರೂರು ಟೋಲ್ಗೇಟ್ ಬಳಿ ಆ್ಯಂಬುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ಬಗ್ಗೆ ತಿಂಗಳ ಅಂತ್ಯದೊಳಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತಿರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮೃತರ ಮಕ್ಕಳೊಂದಿಗೆ ಚರ್ಚೆ ನಡೆಸಿ ಧೈರ್ಯ ತುಂಬಿದರು. ಅಪಘಾತದಲ್ಲಿ ಸಾವನ್ನಪ್ಪಿದವರ ಮರಣದ ದಾಖಲೆ, ವಿವಿಧ ದಾಖಲಾತಿ ಸಮಸ್ಯೆಯ ಬಗ್ಗೆ ಸ್ಥಳೀಯರು ಸಚಿವರ ಬಳಿ ಹೇಳಿಕೊಂಡಿದ್ದು, ಶಾಸಕ ಸುನೀಲ್ ನಾಯ್ಕ ಅಧಿಕಾರಿಗಳೊಂದಿಗೆ ಮಾತನಾಡಿ ಸಂಬಂಧಿಸಿದ ಎಲ್ಲಾ ದಾಖಲೆ ಒದಗಿಸುವ ಬಗ್ಗೆ ಸೂಚಿಸಿದರು.
ವಿಶೇಷ ಪರಿಹಾರದ ಭರವಸೆ:ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೋಟ ಶ್ರೀನಿವಾಸ್, ಆಸ್ಪತ್ರೆಗೆ ಕರೆದೊಯ್ಯುವಾಗ ಈ ಘಟನೆ ನಡೆದಿರುವುದು ದುರಂತ ಹಾಗೂ ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ಸ್ಥಳೀಯವಾಗಿ ಜೀವವಿಮೆ ಇತ್ಯಾದಿ ಲಭಿಸುವ ಕುರಿತು ಶಾಸಕ ಸುನೀಲ್ ನಾಯ್ಕ ನೋಡಿಕೊಳ್ಳುತ್ತಾರೆ. ಇದರೊಂದಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೃತರು ಹಾಗೂ ಗಾಯಾಳುಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ವಿಶೇಷ ಪರಿಹಾರವನ್ನು ಒದಗಿಸುವ ಕುರಿತು ಪ್ರಯತ್ನಿಸಲಾಗುವುದು ಎಂದು ಅಭಯ ನೀಡಿದರು.