ಕಾರವಾರ/ಶಿರಸಿ/ಶಿವಮೊಗ್ಗ/ಹಾಸನ:ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ರಾಜ್ಯ ವ್ಯಾಪಿ ಕರೆ ನೀಡಿದ್ದ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಶಿರಸಿ ಎರಡೂ ಕಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಾರವಾರದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಶಿಕ್ಷಕರು, ಪ್ರಮುಖ ರಸ್ತೆಗಳಲ್ಲಿ ಸಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಾಸನ: ನಗರದಲ್ಲಿಸಾವಿರಾರು ಶಿಕ್ಷಕರು ಸರ್ಕಾರದ ಹೊಸ ನಿಯಮದ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ರು. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರರನ್ನೇ ಪರಿಗಣಿಸಿ ಅವರ ವೇತನ ಶ್ರೇಣಿ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೇ ಬೇಡಿಕೆಯನ್ನು ಈಡೇರಿಸದಿದ್ದರೆ ಸೆ.9ರಂದು ನಡೆಯುವ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ಮಾಡುವ ನಿರ್ಧಾರ ಮಾಡಬೇಕಾಗುತ್ತದೆ ಎಂದು ತಿಳಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗದೆ ಇರುವುದರಿಂದ ಶೇಕಡವಾರು ಪರಿಗಣಿಸಿ ಒಟ್ಟಿಗೆ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾನಿರತ ಶಿಕ್ಷಕರು ಒತ್ತಾಯಿಸಿದ್ದಾರೆ.