ಕರ್ನಾಟಕ

karnataka

ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ ಸಚಿವರಿಂದ ಮಹತ್ವದ ಸಭೆ

By

Published : Sep 20, 2022, 3:12 PM IST

Updated : Sep 20, 2022, 3:41 PM IST

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಪ್ರಸ್ತಾವ ಸರ್ಕಾರದ ಮುಂದಿದ್ದು, ಸೂಕ್ತ ಜಾಗದೊಂದಿಗೆ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಆರೋಗ್ಯ ಸಚಿವರಿಂದ ಮಹತ್ವದ ಸಭೆ
ಆರೋಗ್ಯ ಸಚಿವರಿಂದ ಮಹತ್ವದ ಸಭೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದು ಬಹು ದಿನಗಳ ಬೇಡಿಕೆಯಾಗಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ಶಾಸಕರ ನಿಯೋಗದೊಂದಿಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಸಿದರು.

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಮಾತನಾಡಿದರು

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಪ್ರಸ್ತಾವ ಸರ್ಕಾರದ ಮುಂದಿದ್ದು, ಸೂಕ್ತ ಜಾಗದೊಂದಿಗೆ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಕಾರವಾರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ನೇಮಕ, ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಜಿಲ್ಲೆಯ ವಿವಿಧ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಕರಾವಳಿ, ಮಲೆನಾಡು ಹಾಗೂ ಬಯಲುಸೀಮೆ ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ ಆರೋಗ್ಯ ಇಲಾಖೆ ವಿಷಯದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ವಿವಿಧ ಆಸ್ಪತ್ರೆಗಳಿಗೆ ಸೌಲಭ್ಯ:ವಿಧಾನಮಂಡಲ ಅಧಿವೇಶನ ಬಳಿಕ ಒಂದು ದಿನ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಗುರುತಿಸಿರುವ ಜಾಗಗಳ ವೀಕ್ಷಣೆ ಮಾಡಲಾಗುವುದು. ಅಲ್ಲದೇ, ಕಾರವಾರ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಸೌಲಭ್ಯ ಒದಗಿಸುವ ಬಗ್ಗೆ ಖುದ್ದು ಪರಿಶೀಲನೆ ಮಾಡಲು ತೀರ್ಮಾನಿಸಿರುವುದಾಗಿ ಸಚಿವರು ಹೇಳಿದರು.

ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಹಾಗೂ ವಿವಿಧ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಸಂಬಂಧ ಆರೋಗ್ಯ ಸಚಿವರೊಂದಿಗೆ ನಡೆದ ಸಭೆ ಫಲಪ್ರದವಾಗಿದೆ. ಸಚಿವರು ಖುದ್ದು ಜಿಲ್ಲೆಗೆ ಭೇಟಿ ನೀಡಿ ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸಚಿವ ಶಿವರಾಮ ಹೆಬ್ಬಾರ್, ಶಾಸಕರಾದ ದಿನಕರ್ ಶೆಟ್ಟಿ, ರೂಪಾಲಿ ನಾಯಕ್, ಗಣಪತಿ ಉಳವೇಕರ್, ಶಾಂತರಾಮ್ ಸಿದ್ದಿ, ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರದ್ ನಾಯಕ್, ಕಾರವಾರ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ. ಗಜಾನನ ನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಓದಿ: ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ ಸಚಿವ ಡಾ ಕೆ ಸುಧಾಕರ್

Last Updated : Sep 20, 2022, 3:41 PM IST

ABOUT THE AUTHOR

...view details