ಭಟ್ಕಳ:ಎರಡು ವರ್ಷಗಳ ಹಿಂದೆ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ ಹಾಗೂ ಅದರಲ್ಲಿನ 7 ಮಂದಿ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರಧನ ನೀಡಬೇಕೆಂದು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಂದಿಸಿದ್ದು, ಶನಿವಾರ ವಿಧಾನಸೌಧದಲ್ಲಿ ಮೀನುಗಾರರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಿದ್ದಾರೆ.
ಎರಡು ವರ್ಷದ ಹಿಂದೆ ಡಿಸೆಂಬರ್ 16ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಸಹಿತ 7 ಮಂದಿ ಮೀನುಗಾರರು ಆಕಸ್ಮಿಕವಾಗಿ ಕಣ್ಮರೆಯಾಗಿದ್ದರು. ಆ ಮೀನುಗಾರರೇ ಅವರ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು. ಆದರೆ ಅವರ ಪತ್ತೆ ಇನ್ನೂ ಆಗದ ಹಿನ್ನೆಲೆಯಲ್ಲಿ ಬಡ ಕುಟುಂಬಗಳಿಗೆ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಹಿಂದೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಹಾಗೂ ಉಡುಪಿ ಶಾಸಕ ರಘುಪತಿ ಭಟ್ ಅವರೊಂದಿಗೆ ಮತ್ತು ಕುಮಟ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಜೊತೆಗೆ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ನಿಯೋಗದ ತಂಡವೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ "ಸುವರ್ಣ ತ್ರಿಭುಜ" ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಜನ ಮೀನುಗಾರರ ಕುಟುಂಬಗಳಿಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ ರೂ. 10 ಲಕ್ಷ ಪರಿಹಾರ ಘೋಷಣೆ ಮಾಡುವಂತೆ ಮನವಿ ಮಾಡಲಾಗಿತ್ತು.