ಕರ್ನಾಟಕ

karnataka

ETV Bharat / state

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ: ಜಿಲ್ಲಾಸ್ಪತ್ರೆಯನ್ನೇ ಮೇಲ್ದರ್ಜೆಗೇರಿಸಲು ಮುಂದಾದ ಸರ್ಕಾರ - uttara kannada district hospital

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಯುತ್ತಿದ್ದು, ಈ ಬೆನ್ನಲ್ಲೇ ಸರ್ಕಾರ ಜಿಲ್ಲಾಸ್ಪತ್ರೆಯನ್ನೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಮುಂದಾಗಿದೆ.

hospital
ಉತ್ತರ ಕನ್ನಡ ಜಿಲ್ಲಾಸ್ಪತ್ರೆ

By

Published : Aug 7, 2022, 2:31 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಕಳೆದ ಹಲವು ದಿನಗಳಿಂದ ಸಾರ್ವಜನಿಕರು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಜೊತೆಗೆ ಜಿಲ್ಲೆಯ ಯಾವ ಭಾಗದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎನ್ನುವ ಗೊಂದಲ ಸಹ ಎದುರಾಗಿತ್ತು. ಇದೀಗ ಸರ್ಕಾರ ಕಾರವಾರದ ಜಿಲ್ಲಾ ಆಸ್ಪತ್ರೆಯನ್ನೇ ಮೇಲ್ದರ್ಜೆಗೇರಿಸಲು ಮುಂದಾಗಿದೆ.

ಉಡುಪಿಯ ಶಿರೂರಿನಲ್ಲಿ ನಡೆದ ಅಂಬ್ಯುಲೆನ್ಸ್ ಅಪಘಾತ ಪ್ರಕರಣದ ನಂತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಹೋರಾಟ ಪ್ರಾರಂಭವಾಯಿತು. ಜಿಲ್ಲೆಯಲ್ಲಿ ಆಸ್ಪತ್ರೆ ಇಲ್ಲದ ಕಾರಣ ಬೇರೆ ಜಿಲ್ಲೆಗೆ ರೋಗಿಗಳು ತೆರಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೇ ಕಾರಣಕ್ಕಾಗಿ ಅಪಘಾತ ಬಳಿಕ ನಾಲ್ವರು ಮೃತಪಟ್ಟಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಇದರ ಜೊತೆಗೆ ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ದೊಡ್ಡದಿರುವ ಹಿನ್ನಲೆಯಲ್ಲಿ ಯಾವ ಭಾಗದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಗೊಂದಲ ಸಹ ಎದುರಾಗಿತ್ತು.

ಉತ್ತರ ಕನ್ನಡ ಜಿಲ್ಲಾಸ್ಪತ್ರೆ ಉತ್ತರ ಕನ್ನಡ ಜಿಲ್ಲಾಸ್ಪತ್ರೆ

ಸದ್ಯ ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರದಲ್ಲಿಯೇ ಇರುವ ಜಿಲ್ಲಾ ಆಸ್ಪತ್ರೆಯನ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಆಸ್ಪತ್ರೆಗೆ ಬೇಕಾಗಿರುವ ಅಗತ್ಯತೆಯ ಬಗ್ಗೆ ಚರ್ಚಿಸಿ ಶೀಘ್ರದಲ್ಲಿಯೇ ಕಾರವಾರಕ್ಕೆ ಆಗಮಿಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಜಿಲ್ಲಾ ಕೇಂದ್ರ ಕಾರವಾರ ಒಂದು ಮೂಲೆಯಲ್ಲಿ ಇರುವ ಹಿನ್ನೆಲೆ ಎಲ್ಲಾ ಪ್ರದೇಶದ ಜನರು ಬರಲು ಅನುಕೂಲವಾಗುವಂತೆ ಮಧ್ಯ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿತ್ತು. ಅಲ್ಲದೇ, ಕುಮಟಾದಲ್ಲಿ ಆಸ್ಪತ್ರೆ ನಿರ್ಮಿಸಲು ಜಾಗವನ್ನು ಸಹ ಹುಡುಕುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿತ್ತು. ಇನ್ನೊಂದೆಡೆ, ಜಿಲ್ಲೆಯ ಘಟ್ಟದ ಮೇಲಿನ ಶಿರಸಿಯಲ್ಲೂ ಆಸ್ಪತ್ರೆ ನಿರ್ಮಾಣವಾಗಲಿ ಎನ್ನುವ ಒತ್ತಾಯ ಕೇಳಿ ಬಂದಿತ್ತು. ಇದರ ನಡುವೆ ಸರ್ಕಾರ ಇರುವ ಜಿಲ್ಲಾಸ್ಪತ್ರೆಯಲ್ಲಿಯೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದ್ದು, ಇದಕ್ಕೆ ಕಾರವಾರದ ಸಾರ್ವಜನಿಕರು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕಾರವಾರ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು ಅಭಿಯಾನ

ABOUT THE AUTHOR

...view details