ಕಾರವಾರ(ಉತ್ತರ ಕನ್ನಡ) :ಜಿಲ್ಲೆಯಲ್ಲಿ ಕಳೆದೊಂದು ವಾರದಿಂದಲೂ ಧಾರಾಕಾರವಾಗಿ ಮಳೆಯಾಗುತ್ತಿದೆ. ಹೀಗೆ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ ಸಂಭವಿಸುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಹೊನ್ನಾವರದ ಅಪ್ಸರಕೊಂಡದಲ್ಲಿ ಮಣ್ಣು ಕುಸಿಯುತ್ತಿರುವ ಕಾರಣ ಗುಡ್ಡದ ಕೆಳಗಿನ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದರೆ, ಇನ್ನೊಂದೆಡೆ ಅಣಶಿ ಘಟ್ಟದಲ್ಲಿ ಮಣ್ಣು ಕುಸಿಯುತ್ತಿರುವ ಹಿನ್ನೆಲೆ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
ಜಿಲ್ಲೆಯ ಜೋಯಿಡಾ ತಾಲೂಕಿನ ಅಣಶಿ ಘಟ್ಟದ ರಾಜ್ಯ ಹೆದ್ದಾರಿ 34 ರಲ್ಲಿ ಗುಡ್ಡ ಕುಸಿತದಿದ್ದು ಬೆಳಗಾವಿ - ಕಾರವಾರ ಬಂದ್ ಆಗಿದೆ. ಹೊನ್ನಾವರ ತಾಲೂಕಿನ ಕೆಳಗಿನೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಅಪ್ಸರಕೊಂಡ ಗ್ರಾಮದಲ್ಲಿ ಗುಡ್ಡ ಕುಸಿಯುತ್ತಿದ್ದು, ದೊಡ್ಡ ದೊಡ್ಡ ಕಲ್ಲುಬಂಡೆಗಳು ಸುಮಾರು 750 ಮೀಟರ್ ಉದ್ದಕ್ಕೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಗಣಿ ಇಲಾಖೆ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಬಳಿಕ ಜನರಿಗೆ ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರವಾಗುವಂತೆ ಸೂಚಿಸಿದ್ದಾರೆ.