ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ.. ಕಾರವಾರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ದಿನಗಳ ಬೇಡಿಕೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಂಬಂಧ ದೊಡ್ಡ ಅಭಿಯಾನವೇ ನಡೆದಿತ್ತು. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಸದ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬಂದಿದೆ. ಜಿಲ್ಲೆಯಲ್ಲಿ ಇನ್ನಾದರೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಬಹುದು ಎಂಬ ನಿರೀಕ್ಷೆ ಜನರಲ್ಲಿದೆ.
ಉತ್ತರ ಕನ್ನಡ ಜಿಲ್ಲೆಯ ಜನರ ಬಹು ದಿನದ ಬೇಡಿಕೆ 'ಸುಸಜ್ಜಿತ ಆಸ್ಪತ್ರೆ'. ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಕಾರಣ ನಿತ್ಯ ಚಿಕಿತ್ಸೆಗಾಗಿ ಹೊರ ಜಿಲ್ಲೆ, ಹೊರ ರಾಜ್ಯದ ಆಸ್ಪತ್ರೆಗಳಿಗೆ ಓಡಾಡುವ ಪರಿಸ್ಥಿತಿ ಇದೆ. ಇದೇ ಕಾರಣಕ್ಕೆ ಜಿಲ್ಲೆಯಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ದೊಡ್ಡ ಹೋರಾಟ ನಡೆದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನರು ಬೀದಿಗಿಳಿದು ಹೋರಾಟ ನಡೆಸಿದ್ದರು. ಸ್ವತಃ ಆರೋಗ್ಯ ಸಚಿವರೇ ಜಿಲ್ಲೆಗೆ ಬಂದು ಆಸ್ಪತ್ರೆ ಮಾಡಲು ಸ್ಥಳ ಪರಿಶೀಲನೆ ಮಾಡಿ ತೆರಳಿದ್ದರು. ಅಲ್ಲದೇ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದತೆ ನಡೆಸುತ್ತಿರುವುದಾಗಿ ತಿಳಿಸುತ್ತಲೇ ಬಂದರು. ಆದರೆ ಆಸ್ಪತ್ರೆ ಮಾತ್ರ ನಿರ್ಮಾಣ ಆಗಿರಲಿಲ್ಲ.
ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ತಮ್ಮ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ದಿನದಲ್ಲಿ ಶಂಕುಸ್ಥಾಪನೆ ಮಾಡುವುದಾಗಿ ಹೇಳಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದ್ದು, ನುಡಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದೆಯೇ? ಎಂದು ಸಾರ್ವಜನಿಕರು ಪ್ರಶ್ನೆ ಮಾಡಲಾರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಟ್ವಿಟರ್, ರಕ್ತದಲ್ಲಿ ಪ್ರಧಾನಿಗೆ ಪತ್ರ ಸೇರಿದಂತೆ ದೊಡ್ಡ ಅಭಿಯಾನ ನಡೆದಿತ್ತು. ಜಿಲ್ಲಾದ್ಯಂತ ಪ್ರತಿಭಟನೆಗಳು ಸಹ ನಡೆದಿದ್ದು ಬಿಜೆಪಿ ಸರ್ಕಾರಕ್ಕೆ ಇದು ಮುಜುಗರ ತರುವಂತೆ ಮಾಡಿತ್ತು. ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಸ್ಥಳ ಪರಿಶೀಲನೆ ಸಹ ಮಾಡಿ ನಿಗದಿ ಮಾಡಿದ್ದರು. ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೇ ಇರುವುದು ಬಿಜೆಪಿಗೆ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾಗಿತ್ತು. ಸದ್ಯ ಇದರ ರಾಜಕೀಯ ಲಾಭ ಪಡೆದ ಕಾಂಗ್ರೆಸ್ ಆಸ್ಪತ್ರೆ ನಿರ್ಮಾಣ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಲಿದೆಯೇ ಎನ್ನುವ ಪ್ರಶ್ನೆ ಸಾರ್ವಜನಿಕರದ್ದು.
"ನಾವು ನೂರಕ್ಕೆ ನೂರರಷ್ಟು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡೇ ಮಾಡುತ್ತೇವೆ. ಅಧಿಕಾರಿಗಳು ಕಾರವಾರದ ಮೆಡಿಕಲ್ ಕಾಲೇಜನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲಾಗುವುದು. ಜೊತೆಗೆ ಕುಮಟಾ ಅಥವಾ ಹೊನ್ನಾವರ ಭಾಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿವುದು"- ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ.
"ಸರ್ಕಾರ ರಚನೆಯಾಗಿ ಆರು ತಿಂಗಳ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು. ಈವರೆಗೆ ಈ ಬಗ್ಗೆ ಯಾವುದೇ ಚರ್ಚೆಗೆ ಮುಂದಾಗಿಲ್ಲ. ಇನ್ನಾದರು ಅಧಿಕಾರಿಗಳ ಸಭೆ ನಡೆಸಿ ಶೀಘ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುವ ಮೂಲಕ ಜನರ ಬೇಡಿಕೆಯನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲಿ"- ದೀಪಕ್ ಶೆಣೈ,ಸ್ಥಳೀಯ
ಇದನ್ನೂ ಓದಿ:ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ತಣ್ಣೀರು: ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರ ಆಕ್ರೋಶ