ಕಾರವಾರ:ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಉತ್ತರಕನ್ನಡ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ವೀಕ್ಷಣೆ ಮಾಡಿದ್ದು ಬಿಟ್ಟರೆ ಕಾಮಗಾರಿ ಆರಂಭವಾಗಿರಲಿಲ್ಲ. ಅಂದು ವಿರೋಧ ಪಕ್ಷವಾಗಿದ್ದ ವೇಳೆ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್‌ನಲ್ಲಿ ಉತ್ತರಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೈಬಿಟ್ಟಿದೆ. ಸದ್ಯ ಇದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ಹೌದು, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯೊಂದು ನಿರ್ಮಾಣವಾಗಬೇಕು ಎನ್ನುವುದು ಜನರ ಬಹುದಿನಗಳ ಕನಸು. ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಪರಿಣಾಮ ಪ್ರತಿನಿತ್ಯ ಚಿಕಿತ್ಸೆಗಾಗಿ ಹೊರಜಿಲ್ಲೆ, ಹೊರರಾಜ್ಯದ ಆಸ್ಪತ್ರೆಗಳಿಗೆ ಓಡಾಡುವ ಪರಿಸ್ಥಿತಿ ಇದೆ. ಹೀಗಾಗಿ ಜಿಲ್ಲೆಯಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಹೋರಾಟವೇ ನಡೆದಿತ್ತು. ಜನರ ಹೋರಾಟಕ್ಕೆ ಮಣಿದ ಅಂದಿನ ಬಿಜೆಪಿ ಸರ್ಕಾರದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಜಿಲ್ಲೆಗೆ ಬಂದು ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಹೋಗಿದ್ದರು.
ಆಸ್ಪತ್ರೆಗೆ ಜಾಗ ನಿಗದಿಯಾದರೂ ಆಸ್ಪತ್ರೆ ನಿರ್ಮಾಣ ಕಾರ್ಯ ಮಾತ್ರ ಆರಂಭವಾಗಲೇ ಇಲ್ಲ. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನು ಚುನಾವಣೆಯಲ್ಲಿ ಬಳಸಿಕೊಂಡಿದ್ದು ತಮ್ಮ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ದಿನದಲ್ಲಿ ಶಂಕುಸ್ಥಾಪನೆ ಮಾಡುವುದಾಗಿ ಹೇಳಿತ್ತು. ಆದರೆ ನೂತನ ಸರ್ಕಾರ ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದೇ ಅನ್ಯಾಯ ಮಾಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗದ ವಿಚಾರವನ್ನು ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದರು. ಆದರೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಡಿಸಿದ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕೊಕ್ ನೀಡಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ್ ನಾಯಕ್ ಕಿಡಿಕಾರಿದ್ದಾರೆ.