ಕಾರವಾರ: ಪ್ರಧಾನಿ ನರೇಂದ್ರ ಮೋದಿ ಪರವಾಗಿ ಅಲೆ ಇದೆ. ಅವರ ಆಶೀರ್ವಾದದಿಂದ ಬರುವ ಎಲ್ಲ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಾರವಾರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಬಹಳ ದೊಡ್ಡ ಅಂತರದಿಂದ ನಾವು ಗೆಲ್ಲುವುದಲ್ಲದೆ, ನೂರಕ್ಕೆ ನೂರರಷ್ಟು ಸರ್ಕಾರ ರಚನೆ ಮಾಡುತ್ತೇವೆ. ಮಾಧ್ಯಮಗಳಲ್ಲಿ ಏನೇ ಬಂದರೂ, ಗೋವಾದಲ್ಲೂ ಸಹ ಸ್ಪಷ್ಟ ಬಹುಮತದೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ, ಇದರಲ್ಲಿ ಯಾವುದೇ ಸಂಶಯ ಬೇಡ ಎಂದಿದ್ದಾರೆ.
ಕೋವಿಡ್ ಕೊಂಚ ಕಡಿಮೆಯಾದ ಮೇಲೆ ರಾಜ್ಯದಲ್ಲಿ ಪ್ರವಾಸ ಮಾಡಿ ಪ್ರತಿ ಜಿಲ್ಲೆಯಲ್ಲಿ ಪಕ್ಷವನ್ನ ಬಲಪಡಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 135-140 ಸೀಟುಗಳನ್ನು ಗೆಲ್ಲಲೇಬೇಕು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ನಿನ್ನೆ ತಾನೆ ಪಕ್ಷದ ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದೇನೆ. ನಿಶ್ಚಿತವಾಗಿ ಬಿಜೆಪಿ ಮುಂಬರುವ ದಿನದಲ್ಲೂ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.