ವಿಜಯಪುರ :ಕಾಂಗ್ರೆಸ್ ಪಕ್ಷ ನಿರಂತರವಾಗಿ ವೀರಶೈವ ಲಿಂಗಾಯತ ಸಮಾಜ ಹಾಗೂ ಇತರ ಸಮುದಾಯಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಈ ಮೂಲಕ ಹಿಂದಿನಿಂದಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾ ಬಂದಿದೆ. ಕಾಂಗ್ರೆಸ್ ನವರು ಇಂದು ವೀರಶೈವ ಲಿಂಗಾಯತ ಸಮುದಾಯಕ್ಕೆ ಒಳಿತನ್ನು ಬಯಸುತ್ತಿಲ್ಲ. ಈ ಸಮುದಾಯವನ್ನು ಒಡೆದರೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಜಿಲ್ಲೆಯ ಬಸವನಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಕೆ ಬೆಳ್ಳುಬ್ಬಿ ಪರ ಕೊಲ್ಹಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಲಿಂಗಾಯತ ಸಮಾಜ ಮಾತ್ರವಲ್ಲ, ಹಿಂದುಳಿದ ವರ್ಗ, ದಲಿತ ಸಮಾಜ ಮತ್ತು ವಾಲ್ಮೀಕಿ ಸಮಾಜ, ಅಲ್ಪ ಸಂಖ್ಯಾತರೂ ಕೂಡ ಬಿಜೆಪಿ ಪರವಾಗಿದ್ದಾರೆ. ಜೊತೆಗೆ ಜನರು ಇಂದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ನಿರ್ಧರಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ :ರಾಜ್ಯ ವಿಧಾನಸಭೆಗೆ ಅತಿ ಹೆಚ್ಚು ಬಾರಿ ಆಯ್ಕೆಯಾದ ಶಾಸಕ ಕಲಿಗಳು: ಅಖಾಡದಲ್ಲಿ ಇವರು ಬಾಹುಬಲಿಗಳು!
ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೀರಶೈವ ಲಿಂಗಾಯತರನ್ನು ಒಡೆಯುವ ಕುತಂತ್ರವನ್ನು ಮಾಡಿದ್ದು ಯಾರು ?. ಕಾಂಗ್ರೆಸ್ ಈ ಹಿಂದೆ ಅಧಿಕಾರದಲ್ಲಿದ್ದಾಗ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದು ಗೊತ್ತಾದಾಗ ಲಿಂಗಾಯತ ಸಮುದಾಯವನ್ನು ಒಡೆಯಲು ಮುಂದಾಗಿದ್ದರು. ಇದೀಗ ಮತ್ತೆ ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.