ವಿಜಯಪುರ :ಸಿಂದಗಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ ಮನಗೂಳಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರ ಇಂದು ತಮ್ಮ ತಮ್ಮ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಗೆಲುವಿಗಾಗಿ ಪರಸ್ಪರ ನಾಯಕರು ಆರೋಪ-ಪ್ರತ್ಯಾರೋಪಕ್ಕೂ ಇಳಿದಿದಾರೆ.
ಮಾಜಿ ಸಚಿವ ಎಂ.ಸಿ ಮನಗೂಳಿ ನಿಧನವಾದ ನಂತರ ತೆರವಾಗಿದ್ದ ಈ ಕ್ಷೇತ್ರದ ಉಪಚುನಾವಣೆಗೆ ಅವರ ಪುತ್ರ ಅಶೋಕ ಮನಗೂಳಿ ಅವರನ್ನು ಜೆಡಿಎಸ್‌ನಿಂದ ಸೆಳೆದುಕೊಂಡ ಕಾಂಗ್ರೆಸ್ ತಮ್ಮ ಪಕ್ಷದಿಂದ ಉಪಚುನಾವಣೆಯಲ್ಲಿ ಟಿಕೆಟ್ ನೀಡಿದೆ.
ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ, ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ ಸಮ್ಮುಖದಲ್ಲಿ ಬೃಹತ್ ಮೆರೆವಣಿಗೆ ನಡೆಸಿ ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ಸಲ್ಲಿಕೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಕಂಗೆಟ್ಟು ಹೋಗಿದ್ದಾರೆ. ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅದು ಉಪಚುನಾವಣೆಯಲ್ಲಿ ಮತಗಳಾಗಿ ಕಾಂಗ್ರೆಸ್‌ಗೆ ಬೀಳಲಿವೆ. ಇದು ನಮ್ಮ ಅಭ್ಯರ್ಥಿ ಗೆಲುವಿಗೆ ಸಹಕಾರಿ ಎಂದರು.
25 ಸಾವಿರ ಮತಗಳ ಅಂತರದಲ್ಲಿ ಗೆಲುವಿನ ವಿಶ್ವಾಸ
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಸಹ ಮೆರವಣಿಗೆ ನಡೆಸಿ ಕೇಸರಿ ಪಡೆ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ನಂತರ ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ಸಿಂದಗಿ ಮತಕ್ಷೇತ್ರದಲ್ಲಿ 7 ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಬರುವ ಕಾರಣ 7 ತಂಡಗಳನ್ನು ರಚನೆ ಮಾಡಲಾಗಿದೆ. ನಮ್ಮ ಅಭ್ಯರ್ಥಿ ಸುಮಾರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ ಅ.13ರವರೆಗೂ ನಾಮಪತ್ರ ಹಿಂಪಡೆಯಲು ಕಾಲಾವಕಾಶವಿದೆ. ಕಣದಲ್ಲಿರುವ ಅಭ್ಯರ್ಥಿಗಳು ಅಂತಿಮವಾದ ನಂತರ ಚುನಾವಣೆ ಮತ್ತಷ್ಟು ರಂಗೇರಲಿದೆ. ರಾಜಕೀಯ ನಾಯಕರ ವಾಕ್ಸಮರ ಕೂಡ ಜೋರಾಗಿಯೇ ನಡೆಯುತ್ತಿದೆ.