ವಿಜಯಪುರ: ವಿಜಯಪುರ ಜಿಲ್ಲೆಗೆ ಜನವರಿ 16ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿದ್ಧತೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ ಸಭೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಕಾರ್ಯಗಳನ್ನು ಜವಾಬ್ದಾರಿ, ಶಿಸ್ತುಬದ್ಧ ಹಾಗೂ ಯಾವುದೇ ಲೋಪದೋಷವಿಲ್ಲದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅನೇಕ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದ್ದು, ಸುಮಾರು 300 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಂದು ನಡೆಯುವ ಕಾರ್ಯಕ್ರಮಕ್ಕೆ ಅವಶ್ಯಕ ಪೂರ್ವಸಿದ್ಧತೆಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.
ಸಿಎಂ ಬಿಎಸ್ವೈ ಆಗಮಿಸುವುದು ಬಹುತೇಕ ಖಚಿತಗೊಂಡಿದೆ. ವೇದಿಕೆ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಶಿಷ್ಠಾಚಾರದಂತೆ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸುವ ಜೊತೆಗೆ ಜವಾಬ್ದಾರಿಯುತವಾಗಿ ಅಧಿಕಾರಿಗಳಿಂದ ಆಹ್ವಾನ ಪತ್ರಿಕೆ ತಲುಪಿಸಬೇಕು. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನೆರವೇರುವಂತೆ ನೋಡಿಕೊಳ್ಳಬೇಕು ಎಂದರು.
ಸಿಎಂ ಮುಂದಿರಿಸಲಾಗುವ ಮನವಿಗಳು:
ಬಾದಾಮಿ ಮತ್ತು ಐಹೊಳೆವರೆಗೆ ಬರುತ್ತಿರುವ ಗೋಲ್ಡನ್ ಚಾರಿಯಟ್ ರೈಲು ಸಂಚಾರವನ್ನು ವಿಜಯಪುರಕ್ಕೆ ವಿಸ್ತರಿಸಬೇಕು. ಜಿಲ್ಲೆಯಲ್ಲಿ ಮೀನುಗಾರಿಕೆ ಕಾಲೇಜು ಸ್ಥಾಪನೆಯಾಗಬೇಕು. ಈ ಕುರಿತು ಮುಂದಿನ ಬಜೆಟ್‍ನಲ್ಲಿ ಅನುದಾನ ಕಾಯ್ದಿರಿಸಬೇಕು. ಪಡಿತರ ವ್ಯವಸ್ಥೆಗೆ ಬಿಳಿ ಜೋಳ ಅಳವಡಿಸುವ ಜೊತೆಗೆ 4 ಸಾವಿರ ರೂ.ಗಳ ಕನಿಷ್ಠ ಬೆಂಬಲ ಬೆಳೆ ದೊರಕಿಸಬೇಕು. ಸೈಕ್ಲಿಂಗ್ ವೆಲೋಡ್ರೋಮ್ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ಅನುದಾನ ಕಾಯ್ದಿರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ವಿಜಯಪುರ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಹಾಗೂ ಮುಳವಾಡ ಏತ ನೀರಾವರಿ ವ್ಯಾಪ್ತಿಯ ಬ್ರಿಡ್ಜ್ (ಬಾಕ್ಸ್ ಪುಶ್ಸಿಂಗ್ ) ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕ ಪೈಪ್‍ಲೈನ್ ಮೂಲಕ ಕಾಲುವೆಗಳಿಗೆ ನೀರು ಹರಿಸುವಂತೆ ಕೋರಲಾಗುವುದು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ತಿಳಿಸಿದರು. ಅದರಂತೆ ವಿವಿಧ ಹೊಲಗಳಿಗೆ ರೈತರಿಗೆ ಹೋಗಲು ರಸ್ತೆ ಸೌಲಭ್ಯ ಕಲ್ಪಿಸಲು ಟೌನ್ ಪ್ಲ್ಯಾನಿಂಗ್ ಆ್ಯಕ್ಟ್ಗೆ ತಿದ್ದುಪಡಿ, ಬೇಗಮ್ ತಾಲಾಬ್ ಹಾಗೂ ಬೂತನಾಳ ಕೆರೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.
ಶಾಸಕ ಬಸನಗೌಡ ಪಾಟೀಲ (ಯತ್ನಾಳ), ಮಾಜಿ ಸಚಿವ ಎಂ.ಸಿ. ಮನಗೂಳಿ, ಶಾಸಕ ಸೋಮನಗೌಡ ವಿ ಪಾಟೀಲ(ಸಾಸನೂರ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ಔದ್ರಾಮ್ ಹಾಗೂ ಸೆರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.