ವಿಜಯಪುರ: ಕೊರೊನಾ ಸೋಂಕಿತ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆ ಹಚ್ಚಲು ಅನುಕೂಲವಾಗುವಂತೆ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆ ಆರಂಭಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆರೋಗ್ಯ ಇಲಾಖೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಪ್ರತಿ ದಿನಕ್ಕೆ 1000ದಂತೆ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡುವ ಜೊತೆಗೆ ಮುಂಬರುವ ಒಂದು ವಾರದಲ್ಲಿ 6000 ಟೆಸ್ಟ್ ಗಳನ್ನು ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೋವಿಡ್ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆ ಹಚ್ಚಲು ಅನುಕೂಲವಾಗುವಂತೆ ತಾಲೂಕುವಾರು ಗುರಿ ನಿಗದಿಪಡಿಸಿರುವ ಡಿಸಿ, ಕೋವಿಡ್ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಆದ್ಯತೆ ಮೇಲೆ ಪ್ರಥಮವಾಗಿ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣ ಇದ್ದವರಿಗೆ ಅದೇ ದಿನ ವರದಿ ನೀಡುವ ಜೊತೆಗೆ ಐಸಿಎಮ್‌ಆರ್ ವರದಿಯಲ್ಲಿಯೂ ಅಪ್‌ಲೋಡ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವುದೇ ರೋಗಿಗಳು ಬಂದ ಸಂದರ್ಭದಲ್ಲಿ, ಅವರಿಗೆ ರೋಗ ಲಕ್ಷಣ ಕಂಡುಬಂದರೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ಅವಶ್ಯಕತೆಗೆ ಅನುಗುಣವಾಗಿ ಚಿಕಿತ್ಸೆ ಒದಗಿಸಬೇಕು. ಅದರಂತೆ ಅಗತ್ಯಕ್ಕೆ ತಕ್ಕಂತೆ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ಮೂಲಕ ಕಳುಹಿಸಿಕೊಡುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಾರ್ವಜನಿಕರೂ ಕೂಡಾ ಕೊನೆಯ ಕ್ಷಣದವರೆಗೂ ಕಾಯದೆ ತಕ್ಷಣ ಚಿಕಿತ್ಸೆಗೆ ಒಳಪಟ್ಟು ರೋಗ ನಿವಾರಣೆಗೆ ಗಮನಹರಿಸುವಂತೆ ಸಲಹೆ ನೀಡಿದರು.