ವಿಜಯಪುರ:ಪ್ರವಾಹದಿಂದ ಹಾನಿಗೊಳಗಾದ ಪುನರ್ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಮತ್ತು ಲೋಕೊಪಯೋಗಿ ಹಾಗೂ ಸಮಾಜಕಲ್ಯಾಣ ಸಚಿವರೂ ಆದ ಗೋವಿಂದ ಕಾರಜೋಳ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಲೋಕೊಪಯೋಗಿ ಇಲಾಖೆ, ಸಮಾಜಕಲ್ಯಾಣ ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ನೆರೆಹಾವಳಿ ಸಂದರ್ಭದಲ್ಲಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕಾಮಗಾರಿಗಳು, ಚಾಲ್ತಿಯಲ್ಲಿರುವ ಕಾಮಗಾರಿಗಳು ಮತ್ತು ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಆದ್ಯತೆ ನೀಡಿ ಗುಣಮಟ್ಟದ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರವಾರು ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಬೇಕು. ನೂತನ ಕಾಮಗಾರಿಗಳ ಟೆಂಡರ್‌ಗೆ ಸಂಬಂಧಪಟ್ಟ ಹಣಕಾಸು ಇಲಾಖೆಯ ಅನುಮತಿಯಿಂದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ವಸತಿ ಶಾಲೆ, ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಬೇಕು. ಕೋವಿಡ್-19 ಲಾಕ್‍ಡೌನ್ ಜಾರಿ ಮತ್ತು ಸಂಕಷ್ಟ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರಸ್ತೆ ಮತ್ತು ಚರಂಡಿ ಕೆಲಸಗಳನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳಬೇಡಿ ಎಂದಿದ್ದಾರೆ.
ವಿಜಯಪುರ ಮತ್ತು ಹುಬ್ಬಳ್ಳಿ ಹೆದ್ದಾರಿ ನಿರ್ಮಿಸಲಾಗಿದ್ದು, ಇದರಡಿ ಶಿಲ್ಕು ಉಳಿದಿರುವ 40 ಕೋಟಿ ರೂ. ಪುನರ್‌ಬಳಕೆಗೆ ಸಂಬಂಧಪಟ್ಟಂತೆ ಈಗಾಗಲೇ ಕಳುಹಿಸಲಾಗಿರುವ ಪ್ರಸ್ತಾವನೆ ಮಂಜೂರಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವಿಜಯಪುರ-ಕಾರಜೋಳ ಮಧ್ಯದ 21 ಕೀ.ಮೀ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಹೊಂದಲು ಹೆಚ್ಚುವರಿ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಅನುದಾನ ಬೇಡಿಕೆ, ಪರಿಷ್ಕೃತ ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರಿಗೆ ಹೇಳಿದರು.
ವಿಜಯಪುರ ನಗರದ ಇಟಗಿ ಪೆಟ್ರೋಲ್ ಪಂಪ್‍ದಿಂದ ಗೋದಾವರಿ ಹೋಟೆಲ್‍ವರೆಗೆ ನಿರ್ಮಿಸಬೇಕಾದ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಸ್ತಾವನೆಗೆ ಅನುಮೋದನೆ ಪಡೆದು ಕಾಮಗಾರಿ ಆರಂಭಕ್ಕೆ ವಿಶೇಷ ಗಮನವನ್ನು ನೀಡುವಂತೆ ತಿಳಿಸುತ್ತಾ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗೆ ವಿಶೇಷ ಒತ್ತು ನೀಡುತ್ತಿದ್ದು, ಕೋವಿಡ್-19 ಸಂಕಷ್ಟ ಪರಿಸ್ಥಿತಿಯಿಂದಾಗಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದ್ದು, ಕೋವಿಡ್-19 ಪರಿಸ್ಥಿತಿ ಸುಧಾರಣೆಗೊಂಡ ನಂತರ ಆದ್ಯತೆ ಮೇಲೆ ಈ ಕಾಮಗಾರಿಗಳಿಗೆ ಗಮನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.