ವಿಜಯಪುರ :ಎಲ್ಲಾ ವಿಚಾರಗಳನ್ನು ಕೇಂದ್ರ ನಾಯಕರ ಮುಂದೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಕೇಂದ್ರ ನಾಯಕರು ಭರವಸೆ ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿರುವ ಕುರಿತು ಮಾತನಾಡಿ, ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿತ್ತು. ಈ ಸಂಬಂಧ ದೆಹಲಿಗೆ ತೆರಳಿದ್ದೆ. ರಾಷ್ಟ್ರೀಯ ಅಧ್ಯಕ್ಷರ ಭೇಟಿಗೂ ಮುನ್ನ ಅರುಣಸಿಂಗ್ ಹಾಗೂ ರಾಧಾಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಿದ್ದೇನೆ. ಬಳಿಕ ಅಮಿತ್ ಶಾ ಹಾಗೂ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದರು.
ಸುಮಾರು 25 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಸಿದೆವು. ಎಲ್ಲಾ ವಿಚಾರಗಳನ್ನು ಕೇಂದ್ರದ ನಾಯಕರ ಮುಂದೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಕೇಂದ್ರದ ನಾಯಕರು ಭರವಸೆ ನೀಡಿದ್ದಾರೆ. ಏನಾದರೂ ಹೇಳುವುದಿದ್ದರೆ ನನಗೆ ನೇರವಾಗಿ ಹೇಳಿ ಎಂದು ನಡ್ಡಾ ತಿಳಿಸಿದ್ದಾರೆ. ಯಾರ ಮುಲಾಜೂ ಇಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ನನಗೆ ಯಾವುದೇ ನೋಟಿಸ್ ಇಲ್ಲ, ಎಚ್ಚರಿಕೆ ನೀಡಿಲ್ಲ, ನನ್ನ ಜೊತೆ ಇಬ್ಬರು ನಾಯಕರು ಗೌರವಯುತವಾಗಿ ನಡೆದುಕೊಂಡಿದ್ದಾರೆ ಎಂದರು. ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲಾ ಹೈಕಮಾಂಡ್ ನಿರ್ಣಯ. ಬದಲಾವಣೆ ಯಾರು ಮಾಡುತ್ತಾರೆ ಗೊತ್ತಿಲ್ಲ ಎಂದರು.