ವಿಜಯಪುರ: ಮನೆ-ಮನೆಯಿಂದ ಕಸ ಸಂಗ್ರಹಣೆ, ತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಚಟುವಟಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ತಪ್ಪದೇ ಮನೆ-ಮನೆಯಿಂದ ಕಸ ಸಂಗ್ರಹಣೆ, ಘನತ್ಯಾಜ್ಯಗಳ ವಿಂಗಡಣೆ ಹಾಗೂ ಸಂಸ್ಕರಣಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಜೊತೆಗೆ ಪ್ಲಾಸ್ಟಿಕ್ ಮುಕ್ತ ಜಿಲ್ಲೆ ಹಾಗೂ ನಗರಗಳನ್ನಾಗಿ ರೂಪಿಸಲು ವಿಶೇಷ ಗಮನ ನೀಡುವಂತೆ ಸೂಚಿಸಿದರು.
ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಬಾರ್‍ಕೋಡ್ ನಮೂದಿಸಿ ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷ್ಮೆಂಟ್ ಅಸೋಸಿಯೇಶನ್‍ಗೆ ರವಾನಿಸುವಂತೆ ತಿಳಿಸಿದ ಅವರು, ಈ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕರ ಮೂಲಕ ಸೂಚನಾ ಪತ್ರ ಕಳುಹಿಸಿಕೊಡುವಂತೆ ಸಲಹೆ ನೀಡಿದರು. ಅವಶ್ಯಕ ಪ್ಲಾಸ್ಟಿಕ್ ಹೊರತುಪಡಿಸಿ ಇನ್ನಿತರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿಗಳಲ್ಲಿ ಸ್ವಚ್ಛತಾ ಕಾರ್ಯ ತೀವ್ರಗೊಳಿಸುವ ಜೊತೆಗೆ ಪ್ಲಾಸ್ಟಿಕ್ ದುರ್ಬಳಕೆಯಾಗದಂತೆ ಅಧಿಕಾರಿಗಳೇ ಮುತುವರ್ಜಿ ವಹಿಸುವಂತೆ ಸೂಚಿಸಿದರು.
ಇನ್ನು ಜಿಲ್ಲೆಯು ಐತಿಹಾಸಿಕ ಹಾಗೂ ವಿಶ್ವ ಪ್ರಸಿದ್ದ ಸ್ಮಾರಕಗಳನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸಲು ವಿಶೇಷ ಗಮನ ನೀಡಲಾಗುತ್ತಿದ್ದು, ಸ್ಮಾರಕಗಳ ರಸ್ತೆ ಬದಿ ಮತ್ತು ಸ್ಮಾರಕಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಲು ವಿಶೇಷವಾಗಿ ನಗರದ ಸ್ಮಾರಕಗಳ ವ್ಯಾಪ್ತಿಯಲ್ಲಿಯೂ ಸ್ವಚ್ಚ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳೇ ಉಸ್ತುವಾರಿ ವಹಿಸಿಕೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.