ಬೆಂಗಳೂರು/ವಿಜಯಪುರ: ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಸೆ. 14ರವರೆಗೆ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಸಹಿತ ಮಳೆ: ಮುಂದಿನ 48ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇಹಿತ ಮಳೆಯಾಗಲಿದೆ.
ಭಾರೀ ಮಳೆ ಮುನ್ನೆಚ್ಚರಿಕೆ:ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬು್ಗಿರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಪ್ರತಿ ಘಂಟೆಗೆ 45 – 55 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಸಾಮಾನ್ಯ ಮಳೆ:ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲ ಬಾರಿ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 28 ರಿಂದ 20 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುಖ್ಯಸ್ಥೆ ಡಾ. ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.
1127 ಮನೆಗಳಿಗೆ ಹಾನಿ:ಕಳೆದ ಹಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ವಿಜಯಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1127 ಮನೆಗಳಿಗೆ ಹಾನಿಯಾಗಿದೆ. ವಿಜಯಪುರ 111, ತಿಕೋಟಾ 35, ಬಬಲೇಶ್ವರ 88, ಬಾಗೇವಾಡಿ 63, ನಿಡಗುಂದಿ 47, ಕೊಲ್ಹಾರ 23, ಮುದ್ದೇಬಿಹಾಳ ತಾಲೂಕಿನಲ್ಲಿ ಅತಿ ಹೆಚ್ಚು 367, ತಾಳಿಕೋಟೆ 150, ಇಂಡಿ 65, ಚಡಚಣ 8, ದೇವರ ಹಿಪ್ಪರಗಿ 61, ಸಿಂದಗಿ 57 ಹಾಗೂ ಆಲಮೇಲ ತಾಲೂಕಿನಲ್ಲಿ 52 ಮನೆಗಳಿಗೆ ಹಾನಿಯಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಇದನ್ನೂ ಓದಿ:ಭೀಮಾ ನದಿಯಲ್ಲಿ ತಗ್ಗಿದ ನೀರು.. ಗಾಣಗಾಪುರ ಸೇತುವೆ ಮೇಲೆ ವಾಹನ ಸಂಚಾರ ಆರಂಭ