ವಿಜಯಪುರ :ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮೂರು ಮನೆಗಳು ಕುಸಿತಗೊಂಡಿವೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ವಿಜಯಪುರದಲ್ಲಿ 16.6 ಮಿ.ಮೀಟರ್, ತಿಕೋಟಾ 4.2ಮಿ.ಮೀಟರ್, ಬಬಲೇಶ್ವರದಲ್ಲಿ 3.8 ಮೀ. ಮೀಟರ್ ಮಳೆಯಾಗಿರುವ ಬಗ್ಗೆ ವರದಿ ಆಗಿದೆ. ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಉತ್ತಮ ಮಳೆಗೆ ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಆಣೆಕಟ್ಟೆಯ ಒಳ ಹರಿವು ಹೆಚ್ಚಾಗುತ್ತಿದ್ದು, ಕುಡಿಯುವ ನೀರಿನ ಅನುಕೂಲಕ್ಕಾಗಿ ಜುಲೈ 21 ರಿಂದ ನಾರಾಯಣಪುರ ಜಲಾಶಯಕ್ಕೆ ಆಲಮಟ್ಟಿ ಜಲಾಶಯದಿಂದ ನೀರು ಬಿಡಲಾಗುತ್ತಿದೆ. ಆಲಮಟ್ಟಿ ಆಣೆಕಟ್ಟೆ ಕೆಳಭಾಗದಲ್ಲಿ ವಾಸಿಸುತ್ತಿರುವ ಜನ-ಜಾನುವಾರು, ಪಂಪ್‌ಸೆಟ್ ಹಾಗೂ ಆಸ್ತಿ ಸುರಕ್ಷಿತ ಸ್ಥಳಗಳಿಗೆ ಸಾಗಿಸುವಂತೆ ಕೆಬಿಜೆಎನ್‌ಎಲ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಮೋಹನ್ ಹಲಗತ್ತಿ ಮನವಿ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ನಿಡಗುಂದಿ ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಹಾಗೂ ಪಿಡಿಒ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಡಂಗೂರ ಸಾರಿ ಅಥವಾ ಧ್ವನಿ ವರ್ಧಕದ ಮೂಲಕ ಎಚ್ಚರಿಕೆ ನೀಡುವಂತೆ ತಿಳಿಸಿದ್ದಾರೆ.
ಆಲಮಟ್ಟಿ ಜಲಾಶಯದಲ್ಲಿ ಸದ್ಯ 514.30 ಮೀಟರ್ ನೀರು ಸಂಗ್ರಹವಿದ್ದು, 519.60 ಮೀಟರ್ (123.081 ಟಿಎಂಸಿ) ಸಾಮರ್ಥ್ಯದ ಜಲಾಶಯದಲ್ಲಿ 1,16,648 ಕ್ಯೂಸೆಕ್ ನೀರು ಒಳಹರಿವು ಇದ್ದು, 6,000 ಕ್ಯೂಸೆಕ್ ನೀರು ಹೊರ ಹರಿವು ದಾಖಲಾಗಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಮತ್ತೆ ನೀರು ಆಲಮಟ್ಟಿ ಜಲಾಶಯಕ್ಕೆ ಹೆಚ್ಚುವರಿಯಾಗಿ ಬಿಡುತ್ತಿರುವ ಕಾರಣ ವಾರದಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.