ವಿಜಯಪುರ/ಹುಬ್ಬಳ್ಳಿ:ರಾಜ್ಯದ ಪ್ರತ್ಯೇಕ ಕಡೆಗಳಲ್ಲಿಪಡಿತರ ಅಕ್ಕಿಯ ಅಕ್ರಮ ಸಾಗಾಟ ಮತ್ತು ದಾಸ್ತಾನು ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಎಂಬಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದು, ಲಾರಿಸಮೇತ ಅಪಾರ ಪ್ರಮಾಣದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಅಂಜಾದ ಪಠಾಣ ಮತ್ತು ಅವಿನಾಶ್ ಘುಲೆ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಸಂಭಾಜಿ ಗಾಯಕವಾಡ, ಪವನ ತೊಟ್ಲಾ ಪರಾರಿಯಾಗಿದ್ದಾರೆ. ಆರೋಪಿಗಳು ಲಾರಿಯಲ್ಲಿ ಸುಮಾರು 8,23,310 ಲಕ್ಷ ರೂ ಮೌಲ್ಯದ 28,390 ಕೆ.ಜಿ ಅಕ್ಕಿ ಸಾಗಾಟ ಮಾಡುತ್ತಿದ್ದರು. ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಪಡಿತರ ಅಕ್ಕಿ ದಾಸ್ತಾನು ಮಳಿಗೆ ಮೇಲೆ ಸಿಸಿಬಿ ದಾಳಿ:ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಮಳಿಗೆ ಮೇಲೆ ಶನಿವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯ ಗೋದಾಮಿನ ಮಳಿಗೆಯೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿ 4,42,000 ರೂ ಮೌಲ್ಯದ 130 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ವೀರಾಪುರ ಓಣಿಯ ಶಶಿಕಾಂತ್ ಜರ್ತಾರಘರ (33) ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ತಂಡಕ್ಕೆ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಅಡಿಕೆ ಕಳ್ಳರ ಬಂಧನ, ₹9 ಲಕ್ಷ ಮೌಲ್ಯದ ಮಾಲು ವಶ