ಕರ್ನಾಟಕ

karnataka

ETV Bharat / state

ಪ್ರತಿ ತಿಂಗಳು ರೈತರ ಮನೆ‌ ಬಾಗಿಲಿಗೆ ಸರ್ಕಾರ: ಕೃಷಿ ಸಚಿವ ಬಿ.ಸಿ.ಪಾಟೀಲ್ - High Command Bulao to MLA Yatnal

ಪ್ರತಿ ತಿಂಗಳು ರಾಜ್ಯದ 4-5 ಜಿಲ್ಲೆ ಅಥವಾ ತಾಲೂಕುಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆ ಆಲಿಸುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

Interaction Program with Farmers in Vijayapura
ಕೃಷಿ ಸಚಿವ ಬಿ.ಸಿ ಪಾಟೀಲ್

By

Published : Feb 23, 2021, 4:10 PM IST

ವಿಜಯಪುರ: ರಾಜ್ಯದಲ್ಲಿ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಅದನ್ನು ತಡೆದು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರವೇ ರೈತರ ಮನೆ, ಹೊಲಗಳಿಗೆ ಹೋಗುವ ಯೋಜನೆ ಹಾಕಿಕೊಂಡಿದೆ ಎಂದು ಕೃಷಿ ಸಚಿವ ಬಿ.ಸಿ.‌ಪಾಟೀಲ್ ಹೇಳಿದರು.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ 'ರೈತರೊಂದಿಗೆ ಒಂದು ದಿನ ಸಂವಾದ' ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಅವರು, ಪ್ರತಿ ತಿಂಗಳು ರಾಜ್ಯದ 4-5 ಜಿಲ್ಲೆ ಅಥವಾ ತಾಲೂಕುಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆ ಆಲಿಸುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಈ ಮೂಲಕ ರೈತರಿಗೆ ಆತ್ಮಸ್ಥೈರ್ಯ, ವಿಶ್ವಾಸ ತುಂಬಿ, ಆತ್ಮಹತ್ಯೆ ತಡೆಯಲಾಗುವುದು. ರೈತರ ಹೊಲಗಳಿಗೂ ಸರ್ಕಾರದ ಪ್ರತಿನಿಧಿ, ಅಧಿಕಾರಿಗಳು ಖುದ್ದು ಭೇಟಿ ನೀಡಿ ಸಮಸ್ಯೆ ಆಲಿಸಲಿದ್ದಾರೆ ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ್

ಯತ್ನಾಳ್ ಉತ್ತರಿಸುತ್ತಾರೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ ಕುರಿತು ಪ್ರತಿಕ್ರಿಯಿಸಿ, ಯತ್ನಾಳ್​​ರನ್ನು ದೆಹಲಿಗೆ ಯಾಕೆ ಕರೆಸಿಕೊಂಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಹಾಗಾಗಿ ಆ ಬಗ್ಗೆ ಮಾಹಿತಿ ಇಲ್ಲ. ದೆಹಲಿಯಿಂದ ಬಂದ ಮೇಲೆ ಅವರೇ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.

ಸೂಕ್ತ ತನಿಖೆ ನಡೆಯಲಿದೆ: ಶಿವಮೊಗ್ಗ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದ ಹಿರೇನಾಗವಲಿ ಗ್ರಾಮದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡು 6 ಜನ ಮೃತಪಟ್ಟಿರುವ ಕುರಿತು ಮಾತನಾಡಿ, ಈ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯುವ ಮುನ್ನ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದೆ. ಗಣಿ ಮತ್ರು ಭೂ ವಿಜ್ಞಾನ ಸಚಿವ ಮುರುಗೇಶ್​ ನಿರಾಣಿಯವರಿಗೆ ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದರು.

ABOUT THE AUTHOR

...view details