ವಿಜಯಪುರ: ಕೊರೊನಾದಿಂದಾಗಿ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಸರ್ಕಾರ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಉಚಿತವಾಗಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ.
ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ವಾಗ್ದಾಳಿ ಆಲಮಟ್ಟಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಸಂದರ್ಭದಲ್ಲಿ ಸರ್ಕಾರ ರೈತರಿಗೆ ಯಾವುದೇ ಆರ್ಥಿಕ ಪ್ಯಾಕೇಜ್ ಘೋಷಿಸಿಲ್ಲ. ಅವರ ಸಾಲ ಮನ್ನಾವನ್ನೂ ಮಾಡಲಿಲ್ಲ. ಹಸಿರುವ ಶಾಲು ಹಾಕಿಕೊಂಡು ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಿಜಯಪುರ ಜಿಲ್ಲೆಯೆಲ್ಲೆಡೆ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಕೆಆರ್‌ಎಸ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಬೇಕು. ಜತೆಗೆ ಬೋಟಿಂಗ್ ವ್ಯವಸ್ಥೆಯನ್ನೂ ಮಾಡಬೇಕು ಎಂದು ಅವರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು.
'ವಿಮಾನ ನಿಲ್ದಾಣ ಬಿಟ್ಟರೆ ಜಿಲ್ಲೆಗೆ ಏನೂ ಮಾಡಿಲ್ಲ'
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಅದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸವೂ ನಡೆದಿಲ್ಲ. ಈ ಸರ್ಕಾರಕ್ಕೆ ಕಿವಿ ಕೇಳಿಸುತ್ತಿಲ್ಲ, ಕಣ್ಣು ಕಾಣಿಸುತ್ತಿಲ್ಲ. ಎಷ್ಟೇ ಹೇಳಿದರೂ ಕೆಲಸ ಆಗುತ್ತಿಲ್ಲ. ಈ ಮೂಲಕ ರಾಜಕೀಯದಲ್ಲಷ್ಟೇ ಅಲ್ಲ, ಅಭಿವೃದ್ಧಿಯಲ್ಲಿಯೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಪ್ರಕಾಶ ರಾಠೋಡ ದೂರಿದರು.