ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಸ್ವಾಮೀಜಿ, ವಿಜಯೇಂದ್ರ ವಿಜಯಪುರ: ಇಲ್ಲಿನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸುಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ವಿಜಯಪುರದ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿದ್ದೇಶ್ವರ ಸ್ವಾಮಿಗಳ ಆರೋಗ್ಯ ಸುಸ್ಥಿರವಾಗಿದೆ. ನಾಡಿಮಿಡಿತ ಎಲ್ಲವೂ ಸರಿಯಾಗಿದೆ. ಅವರ ಆರೋಗ್ಯ ವಿಚಾರಣೆ ಮಾಡಿದ್ದೇನೆ ಎಂದು ಹೇಳಿದರು.
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ನಡೆದಾಡುವ ದೇವರು. ಅವರ ಜೊತೆಗೆ ಇರುವ ನಾವೇ ಧನ್ಯರು. ಅವರು ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸುಧಾರಣೆ ಆಗುತ್ತಿದೆ. ಆತಂಕ ಪಡುವ ಅವಶ್ಯಕತೆ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುವುದನ್ನು ನಿಲ್ಲಿಸಬೇಕು. ಅವರ ಪ್ರವಚನವನ್ನು ನಾವಿನ್ನೂ ಕೇಳಬೇಕಿದೆ ಎಂದರು.
ದೇವರ ದಯೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಯಡಿಯೂರಪ್ಪನವರ ಮಗ ಬಂದಿದ್ದಾನೆ ಎಂದು ಹಿರಿಯ ಶ್ರೀಗಳೊಬ್ಬರು ಹೇಳಿದಾಗ ನನಗೆ ಆಶೀರ್ವಾದ ಮಾಡಿದರು. ಶ್ರೀಗಳು ಯಡಿಯೂರಪ್ಪನವರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ನಡೆದಾಡುವ ದೇವರನ್ನು ನೋಡುವ ಸೌಭಾಗ್ಯ ದೊರೆತದ್ದು ನಮ್ಮ ಪೂರ್ವ ಜನ್ಮದ ಪುಣ್ಯ ಎಂದು ವಿಜಯೇಂದ್ರ ಹೇಳಿದರು. ಅಲ್ಲದೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಅವರು ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ :ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಆತಂಕ ಬೇಡ: ಸುತ್ತೂರು ಸ್ವಾಮೀಜಿ