ವಿಜಯಪುರ: ಕೊರೊನಾ ವೈರಸ್ ಸೋಂಕಿತರಿಂದ ಪ್ರಭಾವಕ್ಕೆ ಒಳಗಾಗಿರುವ ರಾಜ್ಯ ಮತ್ತು ಜಿಲ್ಲೆಗಳಿಂದ ಆಗಮಿಸಿದವರನ್ನು ಕೂಡಾ ಹೋಮ್ ಕ್ವಾರಂಟೈನ್ ಮಾಡುವಂತಹ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಮುನ್ನೆಚ್ಚರಿಕೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈವರೆಗೆ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಇನ್ನೊಂದು ಪರಿಣಾಮಕಾರಿಯಾದ ನಿರ್ಣಯಕೈಗೊಂಡಿದ್ದು, ಕೊರೋನಾ ವೈರಸ್‍ನಿಂದ ಪ್ರಭಾವಿತವಾಗಿರುವ ಮಹಾರಾಷ್ಟ್ರ, ಕೇರಳ, ತೆಲಂಗಾಣ ಸೇರಿದಂತೆ ಇನ್ನಿತರ ರಾಜ್ಯಗಳಿಂದ ಮತ್ತು ರಾಜ್ಯದ 10 ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮೀಣ, ಮಂಗಳೂರು, ಮೈಸೂರ, ದಾವಣಗೆರೆ, ಧಾರವಾಡ, ತುಮಕೂರು, ಚಿಕ್ಕಬಳ್ಳಾಪೂರ, ಕಲಬುರ್ಗಿ, ಉಡುಪಿ, ಕೊಡಗು ಜಿಲ್ಲೆಗಳಿಂದ ವಿಜಯಪುರ ಜಿಲ್ಲೆಗೆ ಆಗಮಿಸಿದವರನ್ನು ಗುರುತಿಸಿ ಹೋಮ್ ಕ್ವಾರಂಟೈನ್ ಮಾಡಲಾಗುವುದು ಎಂದರು.