ನಿವೃತ್ತ ಪೊಲೀಸ್ ಅಧಿಕಾರಿ ಮಹೇಂದ್ರ ನಾಯಕ ವಿಜಯಪುರ :ಜನಸೇವೆ ಮಾಡುವ ಉದ್ದೇಶದಿಂದ ಪೊಲೀಸ್ ನಿರೀಕ್ಷಕ ಹುದ್ದೆಗೆ ರಾಜಿನಾಮೆ ನೀಡಿದ್ದು, ನಾಗಠಾಣ ವಿಧಾನಸಭಾ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಮಹೇಂದ್ರ ನಾಯಕ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿಯೂ ಬಿಜೆಪಿ ಟಿಕೆಟ್ ಪಡೆದುಕೊಳ್ಳಲು ಇಚ್ಛಿಸಿದ್ದೆ. ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಲಿಲ್ಲ. ಈಗ ಟಿಕೆಟ್ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಈಗಾಗಲೇ ರಾಜೀನಾಮೆ ನೀಡಿದ್ದು, ರಾಜೀನಾಮೆ ಸಹ ಅಂಗೀಕೃತವಾಗಿದೆ. ಈಗಾಗಲೇ ಪಕ್ಷದ ಹೈಕಮಾಂಡ್ ಭೇಟಿ ಮಾಡಿದ್ದು, ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಇಂದಿನಿಂದಲೇ ರಾಜಕೀಯ ಜೀವನ ಆರಂಭಿಸಿದ್ದೇನೆ. ಬಿಜೆಪಿಯಿಂದ ಈ ಹಿಂದೆ ತಾಲೂಕು ಪಂಚಾಯಿತಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದೆ. ನಂತರ ಪೊಲೀಸ್ ಇಲಾಖೆಯಲ್ಲಿ ನೇಮಕಾತಿಯಾದ ಮೇಲೆ ರಾಜಕೀಯ ಜೀವನದಿಂದ ದೂರ ಉಳಿದಿದ್ದೆ. ಈಗ ಮತ್ತೆ ಜನಸೇವೆ ಮಾಡಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ನಾಗಠಾಣ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಸಂಬಂಧ ಬಿಜೆಪಿ ವರಿಷ್ಠರ ಜತೆ ಮಾತುಕತೆ ಸಹ ನಡೆಸಿರುವುದಾಗಿ ಮಹೇಂದ್ರ ನಾಯಕ್ ತಿಳಿಸಿದರು.
ನಾನು ಪೊಲೀಸ್ ಅಧಿಕಾರಿಯಾಗಿದ್ದ ವೇಳೆ ಸಾಕಷ್ಟು ಜನಪರ ಕೆಲಸ ಮಾಡಿ ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನಾನು ಪೊಲೀಸ್ ಇಲಾಖೆ ಬಿಡಲು ಯಾವುದೇ ಸಮಸ್ಯೆ ಇಲ್ಲ. ಮೊದಲಿನಿಂದ ಜನಸೇವೆ ಮಾಡಲು ರಾಜಕೀಯಕ್ಕೆ ಬರುವ ಮಹದಾಸೆ ಇತ್ತು. ಅದರಂತೆ 2023 ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.
ಉನ್ನತ ಅಧಿಕಾರಿಗಳು ರಾಜಕೀಯ ಎಂಟ್ರಿ :ಉನ್ನತ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳಿಬ್ಬರು ಸಮಾಜ ಸೇವೆ ಮಾಡಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶಂಭು ಕಲ್ಲೋಳಿಕರ ಹಾಗೂ ಪೊಲೀಸ್ ಇಲಾಖೆಯಲ್ಲಿ ಸಿಪಿಐ ಆಗಿ ಕಾರ್ಯನಿರ್ವಹಿಸಿದ್ದ ಬಸವರಾಜ್ ಬಿಸನಕೊಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಧಾನಸಭೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ರಾಯಭಾಗ ವಿಧಾನಸಭಾ ಕ್ಷೇತ್ರದಿಂದ ಮಾಜಿ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಪಿಐ ಬಸವರಾಜ್ ಬಿಸನಕೊಪ್ಪ ಅವರು ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಶಂಭು ಕಲ್ಲೋಳಿಕರ ಅವರು ರಾಯಭಾಗ ವಿಧಾನಸಭಾ ಕ್ಷೇತ್ರದ ಮೀಸಲು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಬಿ ಫಾರಂ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.
ಮತ್ತೊಂದೆಡೆ ಅಥಣಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಬಸವರಾಜ್ ಬಿಸನಕೊಪ್ಪ ತಯಾರಿ ನಡೆಸಿದ್ದಾರೆ. ವಿಜಯಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಸವರಾಜ್ ಬಿಸನಕೊಪ್ಪ ತಮ್ಮ ಸಿಪಿಐ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಅಥಣಿ ವಿಧಾನಸಭಾ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಅಥಣಿ ವಿಧಾನಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಗಳಾದ ಮಹೇಶ್ ಕುಮಠಳ್ಳಿ, ಲಕ್ಷ್ಮಣ್ ಸವದಿ, ಗಜಾನನ್ ಮಂಗಸೂಳಿ ವಿರುದ್ಧ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ :ಸರ್ಕಾರಿ ಹುದ್ದೆಗಳಿಗೆ ಗುಡ್ ಬೈ ಹೇಳಿ ಚುನಾವಣೆ ಕಣಕ್ಕೆ ಇಳಿದ ಇಬ್ಬರು ಅಧಿಕಾರಿಗಳು..