ವಿಜಯಪುರ:ಕೊವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಹೋಳಿ ಹಬ್ಬ ಆಚರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಆದೇಶಿಸಿದ್ದಾರೆ.
ಜಿಲ್ಲೆಯು ಮಹಾರಾಷ್ಟ್ರ ರಾಜ್ಯದ ಗಡಿ ಹಂಚಿಕೊಂಡಿದ್ದು, ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಮಾ. 28ರಿಂದ 31ರವರೆಗೆ ನಡೆಯಲಿರುವ ಹೋಳಿ ಹಬ್ಬವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೋಳಿ ಆಚರಣೆಗೆ ನಿಷೇಧ ಕುರಿತ ಆದೇಶ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ, ತಜ್ಞರ ಜತೆ ಸಭೆ ನಡೆಸಿದ್ದು, ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ಹೋಳಿ ಹಬ್ಬವನ್ನು ಆಚರಿಸುವುದು ಕಷ್ಟ ಸಾಧ್ಯವಾದ ಕಾರಣ ಹೋಳಿ ಹಬ್ಬ ಆಚರಣೆ ಮಾಡದಂತೆ ನಿಷೇಧ ಹೇರಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
ಧಾರ್ಮಿಕ ಪೂಜೆ ಹಾಗೂ ಸಾಂಪ್ರದಾಯಿಕ ಆಚರಣೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಇದರಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ..ಪ್ರತಿಪಕ್ಷಗಳ ಸಿಡಿ ಕೋಲಾಹಲ ವಿಚಾರ: ಬಿಜೆಪಿ ನಾಯಕರ ಪ್ರತಿಕ್ರಿಯೆಯೇನು?