ಮುದ್ದೇಬಿಹಾಳ: ಹೆಚ್ಚುತ್ತಿರುವ ಕೊರೊನಾ ವೈರಸ್ ಹಾವಳಿ ನಿಯಂತ್ರಿಸುವ ಉದ್ದೇಶದಿಂದ ಬಕ್ರೀದ್ ಹಬ್ಬದ ದಿನದಂದು ತಾಲೂಕಿನ ಯಾವುದೇ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಜಿಲ್ಲಾಡಳಿತ ಆಯಾ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಪ್ರಾರ್ಥನೆ ಸಲ್ಲಿಸಬೇಕು ಎಂದು ಸಿಪಿಐ ಆನಂದ ವಾಘಮೋಡೆ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಬಕ್ರೀದ್ ಹಬ್ಬದ ಶಾಂತಿಪಾಲನಾ ಸಭೆಯಲ್ಲಿ ಅವರು ಮಾತನಾಡಿದರು. ಆಯಾ ಮಸೀದಿಗಳಲ್ಲಿ 50ಕ್ಕೂ ಹೆಚ್ಚು ಜನರಿಗೆ ಸೇರಲು ಅವಕಾಶ ಇರುವುದಿಲ್ಲ. ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು, 10 ವರ್ಷ ಒಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡಬಾರದು. ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಬಂದರೆ ಅವರ ಬಗ್ಗೆ ವಿಶೇಷ ಗಮನ ಹರಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಶಾಂತಿಯುತವಾಗಿ, ಗದ್ದಲಕ್ಕೆ ಆಸ್ಪದ ಸಿಗದಂತೆ ಪ್ರಾರ್ಥನೆ ಮಾಡುವಂತೆ ಸೂಚಿಸಿದರು.