ವಿಜಯಪುರ: ವೇತನ ಹೆಚ್ಚಿಸುವಂತೆ ಹಾಗೂ ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನ ಒದಗಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ವೈರಸ್ ಸಮಯದಲ್ಲಿ ತಮ್ಮ ಜೀವಗಳನ್ನು ಲೆಕ್ಕಿಸದೆ ಕಾರ್ಯ ನಿರ್ವಹಿಸುತ್ತಿರುವ ನಮಗೆ ಕಡಿಮೆ ವೇತನ ನೀಡಲಾಗುತ್ತಿದೆ. ಸರಿಯಾದ ಉದ್ಯೋಗ ಭದ್ರತೆಯನ್ನು ಈವರೆಗೂ ನೀಡಿಲ್ಲ. ವೇತನ ಹೆಚ್ಚಿಸುವಂತೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಘೋಷಿಸಿದ ಪ್ಯಾಕೇಜ್ ಸರಿಯಾಗಿ ತಲುಪುತ್ತಿಲ್ಲ. ಪ್ರೋತ್ಸಾಹ ಧನ ಹಾಗೂ ಗೌರವಧನ ಸೇರಿ ಮಾಸಿಕವಾಗಿ 12 ಸಾವಿರ ನೀಡಬೇಕು. ಎಲ್ಲ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಪಾಸಿಟಿವ್ ಕಂಡುಬಂದವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.