ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ಕೂಡಲೇ ಕೈ ಬಿಡುವಂತೆ ಒತ್ತಾಯಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೋವಿಡ್ ಪಿಡುಗು ತೊಲಗಿಸುವುದನ್ನು ಬಿಟ್ಟು ಸರ್ಕಾರ ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಹೊರಟಿದೆ. ಶಿಕ್ಷಣವನ್ನೇ ಖಾಸಗೀಕರಣ ಮಾಡಿ ವ್ಯಾಪಾರ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ಸಂಸತ್ತಿನಲ್ಲಿ ಶಿಕ್ಷಣ ನೀತಿ ಕುರಿತು ಯಾವುದೇ ಚರ್ಚೆ ನಡೆಸಿಲ್ಲ. ಇತ್ತ ಹೊಸ ಶಿಕ್ಷಣ ನೀತಿಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಅಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೊಸ ಶಿಕ್ಷಣ ನೀತಿಯಿಂದ ಅನ್ಯಾಯವಾಗುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಹೊಸ ಶಿಕ್ಷಣ ನೀತಿಯಲ್ಲಿ ಖಾಸಗಿ ಪಾಲುದಾರಿಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದ್ದು, ಸರ್ಕಾರ ತಕ್ಷಣವೇ ಹೊಸ ಶಿಕ್ಷಣ ನೀತಿ ಕೈ ಬಿಡುವಂತೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.