ಕಲಬುರಗಿ:ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಸಿಎಎ ಹಾಗೂ ಎನ್ಆರ್ಸಿ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಯುವತಿ ಅಮೂಲ್ಯ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿವೆ. ಕಲಬುರಗಿ, ಬೀದರ್, ಹುಬ್ಬಳ್ಳಿ ಹಾಗೂ ವಿಜಯಪುರದಲ್ಲಿ ಅಮೂಲ್ಯ ವಿರುದ್ಧ ವಿವಿಧ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.
ಕಲಬುರಗಿಯಲ್ಲಿ ಶ್ರೀರಾಮ ಸೇನೆ ಆಕ್ರೋಶ:ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಳನ್ನು ಗಡಿಪಾರು ಮಾಡುವಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಹಾಗೂ ಅಮೂಲ್ಯ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಬೀದರ್ನಲ್ಲಿ ಕರವೇ ಪ್ರತಿಭಟನೆ:ಬೀದರ್ನ ಅಂಬೇಡ್ಕರ್ ವೃತ್ತದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಅಮೂಲ್ಯ ಭಾವಚಿತ್ರಕ್ಕೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರ ಹಾಕಿದರು. ದೇಶ ವಿರೋಧಿ ಕೃತ್ಯಕ್ಕೆ ಸಾಕ್ಷಿಯಾದ ಕಾರ್ಯಕ್ರಮ ಆಯೋಜಕರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.