ವಿಜಯಪುರ/ಕಲಬುರಗಿ: 72ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಮಹಿಳಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೇರವೇರಿಸಿದರು.
ನಂತರ ಸಚವರು ಧ್ವಜವಂದನೆ ಸ್ವೀಕರಿಸಿದ ನಂತರ ಪೊಲೀಸ್ ಇಲಾಖೆಯ ವಿವಿಧ ವಿಭಾಗದವರು ಆಕರ್ಷಕ ಪಥ ಸಂಚಲನ ನಡೆಸಿದರು. ನಂತರ ಜಿಲ್ಲೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೊವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತ ಉತ್ತಮ ಕಾರ್ಯ ನಿರ್ವಹಿಸಿದೆ. ಕೊವಿಡ್ ಸೋಂಕಿತರ ಪೈಕಿ ಶೇ. 92 ಜನ ಗುಣಮುಖರಾಗಿದ್ದು, ಜಿಲ್ಲೆಯ ವೈದ್ಯರ, ಆರೋಗ್ಯ ಕಾರ್ಯಕರ್ತ ಸತತ ಪರಿಶ್ರಮದ ಫಲವಾಗಿದೆ ಎಂದರು.
ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಆಚರಣೆ: ಗಣರಾಜ್ಯೋತ್ಸವ ಪ್ರಯುಕ್ತ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಕ್ಕೆ ಸಚಿವ ಉಮೇಶ್ ಕತ್ತಿ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಸ್ತಬ್ಧಚಿತ್ರಗಳು ಗಮನ ಸೆಳೆದವು. ಪಾಲಿಕೆಯು ಕಸ ವಿಲೇವಾರಿಯ ಕುರಿತಾಗಿ ಮಾಡಿದ್ದ ಸ್ತಬ್ಧಚಿತ್ರ ಸಾರ್ವಜನಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿತು.
ಬಳಿಕ ಮಾತನಾಡಿದ ಸಚಿವ ಕತ್ತಿ, ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧವಾಗಿದೆ. 2013-14 ನೇ ಸಾಲಿನಿಂದ ಇಲ್ಲಿವರೆಗೆ 7385 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಲಾಗಿದೆ. ಈ ಪೈಕಿ 5279 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಶೇ.100 ರಷ್ಟು ಪ್ರಗತಿ ಸಾಧಿಸಲಾಗುತ್ತಿದೆ.18466 ಕಾಮಗಾರಿಗಳು ಪೂರ್ಣಗೊಂಡಿವೆ. 2020-21ನೇ ಸಾಲಿಗೆ 1132 ಕೋಟಿ ರೂಪಾಯಿ ಅನುದಾನ ನಿಗದಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಸಾಧನ ಸಲಕರಣೆ ವಿತರಣೆ ಮಾಡಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಅತಿವೃಷ್ಟಿಗೆ ಗುರಿಯಾದ 261877 ರೈತರಿಗೆ 417.48 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ರು.