ವಿಜಯಪುರ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲೆ, ತಾಲೂಕು ಕೇಂದ್ರದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವ ಚಿಂತನೆ ರಾಜ್ಯ ಸರ್ಕಾರದ ಮಟ್ಟದಲ್ಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು.
ಆಲಮಟ್ಟಿಯ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಭೀತಿಯಿಂದ ಹೊರಬರಲು ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್ಡೌನ್ ಮಾಡಿದೆ. ಅದರ ಅವಧಿ ಮುಗಿಯುತ್ತಾ ಬಂದಿದ್ದು, ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಅಲ್ಲಿ ನಮ್ಮ ಸಿಎಂ ಯಡಿಯೂರಪ್ಪ ರಾಜ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿ, ಕೆಲ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವ ಪ್ರಸ್ತಾಪ ಸಲ್ಲಿಸುವ ಸಾಧ್ಯತೆಗಳಿವೆ.
ರಾಜ್ಯ ಮಟ್ಟದಲ್ಲಿ ಒಂದು ಸುತ್ತಿನ ಮಾತುಕತೆ ವೇಳೆ ಪಾಸಿಟಿವ್ ಇಲ್ಲದ ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವ ಕುರಿತು ಚರ್ಚೆ ನಡೆದಿದೆ ಎಂದರು. ಆದರೆ, ಬಸ್ ಸಂಚಾರ ಎಲ್ಲಾ ಜಿಲ್ಲೆಯಲ್ಲಿ ಆರಂಭಿಸಬೇಕು ಎನ್ನುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಯಾಕೆಂದರೆ, ಕೆಲ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಾಖಲಾಗದಿದ್ದರೂ ಅಕ್ಕಪಕ್ಕದ ಜಿಲ್ಲೆಯಲ್ಲಿ ಇರುವ ಕಾರಣ ಬಸ್ ಸಂಚಾರ ಸದ್ಯಕ್ಕೆ ಅಸಾಧ್ಯ ಎಂದರು. ರಾಜ್ಯದಲ್ಲಿ ಲಾಕ್ಡೌನ್ ಜಾರಿ ಆದ ಮೇಲೆ ಜನರು ಇದಕ್ಕೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಜನರ ಸಹಕಾರ ಇದ್ದಿದ್ದರೆ ಇನ್ನೂ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಬಹುದಿತ್ತು ಎಂದರು.
ರಾಜ್ಯದಲ್ಲಿ ಈವರೆಗೆ ಸುಮಾರು 21 ಸಾವಿರ ಜನ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಅವರಲ್ಲಿ 17 ಸಾವಿರ ಜನ ಬೇರೆ ಬೇರೆ ರಾಜ್ಯದಿಂದ ಬಂದವರೆ ಆಗಿದ್ದಾರೆ ಎಂದ ಅವರು, ರಾಜ್ಯದಲ್ಲಿ ಈವರೆಗೆ ಕೊರೊನಾ ಪಾಸಿಟಿವ್ ಇದ್ದವರ ಸಂಖ್ಯೆ 207, ಸಾವನ್ನಪ್ಪಿದವರ ಸಂಖ್ಯೆ 6 ಜನ ಮಾತ್ರ ಎಂದರು.