ಮುದ್ದೇಬಿಹಾಳ(ವಿಜಯಪುರ): ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿರುವ ಒಳಚರಂಡಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ, ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಜೊತೆಗೆ ಬಾಕಿ ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪುರಸಭೆ ಸದಸ್ಯರು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಯುಜಿಡಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು: ಡಿಸಿ ಪಿ.ಸುನೀಲ್‌ಕುಮಾರ್
ಮುದ್ದೇಬಿಹಾಳ ಪಟ್ಟಣದ ಯುಜಿಡಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸುವುದರ ಜೊತೆಗೆ ಅಗತ್ಯವಿರುವ ಸ್ಥಳಗಳಲ್ಲಿ ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್, ಯುಜಿಡಿ ಅಧಿಕಾರಿ ರಾಮರಾವ್ ರಾಠೋಡ ಅವರಿಗೆ ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಸದಸ್ಯರು, ಪಟ್ಟಣದಲ್ಲಿ ಕಳೆದ 4-5 ವರ್ಷಗಳಿಂದ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದರೂ ಗುಣಮಟ್ಟದ ಕಾಮಗಾರಿ ಮಾಡಿಲ್ಲ. ಕೆಲವು ಕಡೆ ರಸ್ತೆಗಳನ್ನು ಅಗೆದು ಹಾಗೆಯೇ ಬಿಡಲಾಗಿದೆ ಎಂದು ದೂರಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್, ಬಾಕಿಯಿರುವ ಯುಜಿಡಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು. ಜೊತೆಗೆ ಅಗತ್ಯವಿರುವ ಸ್ಥಳಗಳಲ್ಲಿ ರಸ್ತೆಗಳನ್ನು ದುರಸ್ತಿಪಡಿಸಬೇಕು. ಈ ಕೆಲಸ 15 ದಿನಗಳಲ್ಲಿ ಪ್ರಗತಿ ಕಾಣಬೇಕು. 15 ದಿನಗಳ ಬಳಿಕ ಮತ್ತೊಮ್ಮೆ ನಾನೇ ಮುದ್ದೇಬಿಹಾಳಕ್ಕೆ ಬರುತ್ತೇನೆ ಎಂದು ಯುಜಿಡಿ ಅಧಿಕಾರಿ ರಾಮರಾವ್ ರಾಠೋಡ ಅವರಿಕೆ ಎಚ್ಚರಿಗೆ ನೀಡಿದರು.