ವಿಜಯಪುರ: ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಕೃಷ್ಣಾ ನ್ಯಾಯಾಧೀಕರಣ ತೀರ್ಪಿನಂತೆ ರಾಜ್ಯ ಸರ್ಕಾರ ನಡೆದುಕೊಳ್ಳಲಿದೆ. ಜಲಾಶಯದ ಮಟ್ಟ ಹೆಚ್ಚಿಸಲು ಬದ್ಧವಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಬದ್ಧ: ಸಿಎಂ ಬಿಎಸ್ವೈ
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ರ ಬದಲಿಗೆ 524.25 ಮೀ. ಗೆ ಹೆಚ್ಚಳ ಮಾಡಲಾಗುವುದು. ಈ ಬಗ್ಗೆ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ನಂತರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಲಮಟ್ಟಿ ಜಲಾಶಯದ ಎತ್ತರ ಏರಿಕೆ ವಿಚಾರದಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕೃಷ್ಣಾ ನ್ಯಾಯಾಧೀಕರಣದ ಆಲಮಟ್ಟಿ ಜಲಾಶಯದ ಸದ್ಯ ಇರುವ ಎತ್ತರ 519.60 ರ ಬದಲಿಗೆ 524.25 ಮೀಟರ್ ಹೆಚ್ಚಳ ಮಾಡಲಾಗುವುದು. ಈಗಾಗಲೇ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಶೀಘ್ರ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಮನವಿ ಮಾಡಿದ್ದಾರೆ ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇರುವುದು ನಿಜ. ಆದ್ರೆ ಸಂಪನ್ಮೂಲ ಕ್ರೋಢೀಕರಣ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಬೆಳೆ ಹಾನಿ, ಮನೆಗಳ ದುರಸ್ತಿಗೆ ಹಣ ಸದುಪಯೋಗ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮುಂದಿನ ತಿಂಗಳು ಪ್ರಧಾನಿ ಅವರನ್ನು ಭೇಟಿ ಮಾಡಿ ಆಲಮಟ್ಟಿ ಜಲಾಶಯದ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.