ಕರ್ನಾಟಕ

karnataka

ETV Bharat / state

ಪ್ರವಾಹ ಸಂದರ್ಭ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಯಾದಗಿರಿ ಡಿಸಿ ಸೂಚನೆ - yadgiri latest news

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪ್ರವಾಹ ಪರಿಸ್ಥಿತಿ ಎದುರಿಸಲು ತುರ್ತು ಸಭೆ ಏರ್ಪಡಿಸಲಾಗಿತ್ತು. ಪ್ರವಾಹ ಸಂದರ್ಭ ಎದುರಾದ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ತಹಶೀಲ್ದಾರರು ಹಾಗೂ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Be prepared to face a  flood situation: yadgiri dc dr. ragapriya
ಪ್ರವಾಹ ಸಂದರ್ಭ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಯಾದಗಿರಿ ಡಿಸಿ ಸೂಚನೆ

By

Published : Oct 17, 2020, 5:13 PM IST

ಯಾದಗಿರಿ:ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ತಾಲೂಕಿನಲ್ಲಿರುವ ಸೊನ್ನ ಬ್ಯಾರೇಜ್‌ನಿಂದ ಸುಮಾರು 8 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ಹಾಗಾಗಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿನ ಜನ-ಜಾನುವಾರುಗಳ ರಕ್ಷಣೆಗೆ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ತಹಶೀಲ್ದಾರರು ಹಾಗೂ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ತುರ್ತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ, ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಹರಿ ಬಿಡುತ್ತಿರುವ ಕಾರಣ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಸಂದರ್ಭ ಎದುರಾಗಲಿದೆ. ಗ್ರಾಮಗಳ ಜನ ಹಾಗೂ ಜಾನುವಾರುಗಳನ್ನು ಕೂಡಲೇ ಸುರಕ್ಷಿತ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕಾಗಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ತಾಲೂಕುಗಳ ತಹಶೀಲ್ದಾರರು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಪ್ರವಾಹ ಸಂಭವಿಸಬಹುದಾದ ಗ್ರಾಮಗಳ ಗ್ರಾಮಸ್ಥರನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ವಾಹನಗಳನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಭೀಮಾ ನದಿ ಪಾತ್ರದ ಸುಮಾರು 500 ಮೀಟರ್ ವ್ಯಾಪ್ತಿಯಲ್ಲಿ ಬರುವ 12 ಗ್ರಾಮಗಳಿಗೆ ಪ್ರವಾಹ ಸಂಭವಿಸಲಿದ್ದು, ಆ ಗ್ರಾಮಗಳಲ್ಲಿರುವ ಜನರನ್ನು ಸ್ಥಳಾಂತರಿಸಬೇಕು. ಈ ಕುರಿತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ಪ್ರವಾಹದಿಂದ 33 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಳ್ಳಲಿದ್ದು, ಮುಂಜಾಗ್ರತಾ ಕ್ರಮವಾಗಿ ಆ ಗ್ರಾಮಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ವಿತರಣೆ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರವಾಹದಿಂದ ಸಂತ್ರಸ್ತರಾದವರಿಗೆ ಜಿಲ್ಲಾಡಳಿತದಿಂದ 14 ಕಾಳಜಿ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು, ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಡಿತಗೊಳ್ಳಬಾರದು, ಅವರ ಆರೋಗ್ಯದ ತಪಾಸಣೆಗೆ ವೈದ್ಯರನ್ನು ನೇಮಿಸಬೇಕು, ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ತಿಳಿಸಿದರು. ಕಾಳಜಿ ಕೇಂದ್ರದಲ್ಲಿ ಉತ್ತಮ ಆಹಾರ ಪೂರೈಸಬೇಕು, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಸ್ಯಾನಿಟೈಸ್‌ರ್, ಮಾಸ್ಕ್ ನೀಡುವುದರ ಜೊತೆಗೆ ಕಾಳಜಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ನಿರ್ಮಿಸಬಹುದಾಗಿರುತ್ತದೆ. ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆ ಕಾಪಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿಯೂ ಸಹ ಮುಂಜಾಗೃತ ಕ್ರಮವಾಗಿ ಸ್ವಚ್ಛತೆ ಕಾಪಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ABOUT THE AUTHOR

...view details