ಯಾದಗಿರಿ:ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಇದೇ ಸೆಪ್ಟೆಂಬರ್ 17ರಂದು ಆಚರಿಸಬೇಕು. ಜೊತೆಗೆ ಕೋವಿಡ್-19 ಹಿನ್ನೆಲೆಯಲ್ಲಿ ಅಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಸಮಾರಂಭವು ಯಾದಗಿರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರಿಸಬಾರದು. ಆದರೆ, ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯ ಎಲ್ಲರಿಗೂ ದೊರಕುವಂತಾಬೇಕು ಮತ್ತು ಫೇಸ್‍ಬುಕ್, ಯೂ ಟ್ಯೂಬ್ ಹಾಗೂ ಟಿ.ವಿ ಚಾನೆಲ್‍ಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಸಾರ್ವಜನಿಕರು ತಾವಿದ್ದಲ್ಲಿಯೇ ನೇರವಾಗಿ ಕಾರ್ಯಕ್ರಮ ವೀಕ್ಷಿಸಬಹುದು ಎಂದು ತಿಳಿಸಿದರು.
ಸೆ.17ರಂದು ಬೆಳಿಗ್ಗೆ 7ರಿಂದ 8 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಧ್ವಜಾರೋಹಣ ನೆರವೇರಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಬೆಳಿಗ್ಗೆ 8.30 ಗಂಟೆಗೆ ಯಾದಗಿರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಪಂಚಾಯಿತಿಯ ಅಧಿಕಾರಿ ಗುರುನಾಥ ಎನ್.ಗೌಡಪ್ಪನವರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಪೌರಾಯುಕ್ತರಾದ ಬಕ್ಕಪ್ಪ, ತಹಶೀಲ್ದಾರ್ ಸೋಫಿಯಾ ಸುಲ್ತಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.