ಯಾದಗಿರಿ:ಜೂ. 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಜಿಲ್ಲೆಯ ಎಲ್ಲಾ ಕೇಂದ್ರಗಳನ್ನು ಕೋವಿಡ್-19 ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಸೋಡಿಯಂ ಹೈಪೋಕ್ಲೋರೈಡ್ ಬಳಸಿ ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ನಿರಾತಂಕವಾಗಿ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸಲಹೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು.
ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಆಯಾ ಕೇಂದ್ರಗಳಲ್ಲಿ ಮಾಸ್ಕ್, ಸಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುವುದು. ಆರೋಗ್ಯ ಸಿಬ್ಬಂದಿ ಕೂಡ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುತ್ತಾರೆ. ಜಿಲ್ಲೆಯ ಕಂಟೈನ್ಮೆಂಟ್ ಝೋನ್ ವಿದ್ಯಾರ್ಥಿಗಳು ಕೂಡ ನಿಗದಿತ ತಮ್ಮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಸಾಮಾನ್ಯ ಜ್ವರ, ಕೆಮ್ಮು ಹಾಗೂ ಇನ್ನಿತರ ರೋಗದ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಪ್ರತಿ ಕೇಂದ್ರದಲ್ಲಿ 2 ಹೆಚ್ಚುವರಿ ಕೋಣೆಗಳನ್ನು ನಿಗದಿಪಡಿಸಲಾಗಿದೆ. ಪೋಷಕರು ಆತಂಕಪಡುವ ಬದಲು ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ನೀಡಿ ಪರೀಕ್ಷೆಗೆ ಕಳುಹಿಸಲು ತಿಳಿಸಿದರು.
ಪರೀಕ್ಷಾ ಕೇಂದ್ರದ ಒಂದು ಕೋಣೆಯಲ್ಲಿ 15-20 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗಾಗಿ ಅನುಕೂಲಕರ ಸ್ಥಳಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವೈಯಕ್ತಿಕ ವಾಹನದಲ್ಲಿ ಕೂಡ ಬರಬಹುದು. ಯಾರೇ ಆಗಲಿ ಕೋವಿಡ್-19 ಸಂಬಂಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯ. ಇನ್ನು ಹಾಲ್ ಟಿಕೆಟ್ ಪಡೆಯದ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ನಕಲು ತಡೆಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿಬಾಬು, ವಿಭಾಗೀಯ ಸಂಚಾಲನಾ ಅಧಿಕಾರಿ ರಮೇಶ್ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಹಿಳ್ಳಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.