ಯಾದಗಿರಿ:ಜಿಲ್ಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಮಾಸ್ಕ್ ಡೇ ಆಚರಿಸಲಾಯಿತು.
ಯಾದಗಿರಿಯಲ್ಲಿ ಮಾಸ್ಕ್ ಡೇ ಆಚರಣೆ...ಕೊರೊನಾ ಕುರಿತು ಜನರಲ್ಲಿ ಜಾಗೃತಿ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಗರದ ವಿವಿಧ ವಾರ್ಡ್‍ಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಕೊರೊನಾ ಜಾಗೃತಿ ಮೂಡಿಸಲಾಯಿತು. ನಗರದ ವಾರ್ಡ್ ನಂ. 25ರಲ್ಲಿ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಸ್.ಶ್ರೀಧರ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ವೈರಸ್ ವಿರುದ್ಧ ಇಡೀ ದೇಶ ಹೋರಾಟ ನಡೆಸುತ್ತಿದೆ. ಹೀಗಾಗಿ ಪ್ರತಿಯೊಬ್ಬ ಸಾರ್ವಜನಿಕರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದರು.
ಇನ್ನು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸುರಪುರದ ಗರುಡಾದ್ರಿ ಕಲಾ ಮಂದಿರದಲ್ಲಿ ಮಾಸ್ಕ್ ದಿನ ಆಚರಿಸಲಾಗಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಚಿವ ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ರಾಜಾ ಮದನಗೋಪಾಲ ನಾಯಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸುವ ಮೂಲಕ ಪರೀಕ್ಷೆಗೆ ಶುಭ ಕೋರಿದರು.
ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲೂ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮಾಸ್ಕ್ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್ ಸಂಗಮೇಶ ಜಿಡಗೆ, ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಮಾಸ್ಕ್ ಧರಿಸಿಸುವಂತೆ ಸೂಚಿಸಿದರು.