ಯಾದಗಿರಿ:ಅಕ್ರಮ ಗಣಿಗಾರಿಕೆ ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ದೇಶಾದ್ಯಂತ ನಡೆಯುತ್ತಿದೆ. ಈ ಸಂಬಂಧ ಚರ್ಚಿಸಲು ಜ. 27 ರಂದು ಅಸೋಸಿಯೇಷನ್ ಮತ್ತು ಜ.28 ರಂದು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈ ಚರ್ಚೆಯ ಬಳಿಕ ಅಕ್ರಮ ಗಣಿಗಾರಿಕೆ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತ ಚರ್ಚೆಗೆ ಹಿರಿಯ ಅಧಿಕಾರಿಗಳ ಸಭೆ ಕರೆದ ಸಚಿವ ಮುರುಗೇಶ್ ನಿರಾಣಿ - ಅಕ್ರಮ ಗಣಿಗಾರಿಕೆ ಕಾಯ್ದೆಗೆ ತಿದ್ದುಪಡಿ
ಅಕ್ರಮ ಗಣಿಗಾರಿಕೆ ಸಂಬಂಧ ವಿಷಯ ಚರ್ಚಿಸಲು ಜ. 27 ರಂದು ಅಸೋಸಿಯೇಷನ್ ಮತ್ತು ಜ.28 ರಂದು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಲು ಯಾದಗಿರಿ ನಗರಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯನ್ನು ಸಕ್ರಮ ಮಾಡಲು ಚಿಂತನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಿದ್ದುಪಡಿ ಮಾಡುವ ಮೂಲಕ ಸಕ್ರಮ ಮಾಡಲು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಗಣಿಗಾರಿಕೆ ನಡೆಯಬೇಕು. ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಕಾನೂನಿನ ಚೌಕಟ್ಟಿನಲ್ಲಿ ಯಾವುದೇ ಅನಾಹುತ ನಡೆಯದಂತೆ ಗಣಿಗಾರಿಕೆ ನಿಯಮಗಳ ಸಡಲಿಕೆ ಮಾಡಲಾಗುವುದು. ಜೊತೆಗೆ ಅಕ್ರಮವಾಗಿ ನಡೆಸುತ್ತಿರುವ ಗಣಿಗಾರಿಕೆ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.