ಯಾದಗಿರಿ: ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಯಡಿ 'ಒಂದು ಜಿಲ್ಲೆಗೆ ಒಂದು ಉತ್ಪನ್ನ' ಬೆಳೆ ಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗಾವಕಾಶ ಕಲ್ಪಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ 'ಒಂದು ಜಿಲ್ಲೆ, ಒಂದು ಉತ್ಪನ್ನ' ಬೆಳೆ ಆಯ್ಕೆಯ ಜಿಲ್ಲಾಮಟ್ಟದ ಕೃಷಿ ರಫ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆ ಕುರಿತು ಪ್ರಕಟಣೆ ನೀಡಿ ನಿಯಮಾನುಸಾರ ಅರ್ಹ ಸಂಪನ್ಮೂಲ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಲು ಸೂಚಿಸಿದರು. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಈಗಾಗಲೇ ಶೇಂಗಾ ಸಂಸ್ಕರಣೆ ಮಾಡುತ್ತಿರುವ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಅಹ್ವಾನಿಸಿ ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಿ ಅಂತಿಮಗೊಳಿಸಲು ಸೂಚಿಸಿದರು.
ಅಂತಿಮವಾಗಿ ಆಯ್ಕೆಗೊಂಡ ಫಲಾನುಭವಿಗಳಿಗೆ ಎನ್ಆರ್ಎಲ್ಎಂ ಸಂಯೋಗದೊಂದಿಗೆ ಸಿಎಪ್ಟಿಆರ್ಐ ಸಂಸ್ಥೆಯ ನುರಿತ ತಜ್ಞರಿಂದ ತರಬೇತಿ ನೀಡಲು ಹಾಗೂ ಯೋಜನೆ ಕುರಿತು ಹೆಚ್ಚಿನ ಪ್ರಚಾರ ನೀಡಲು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು. ಜೊತೆಗೆ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಮತ್ತು ಎನ್ಆರ್ಎಲ್ಎಂ ಕೋ-ಆರ್ಡಿನೇಟರ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ತಿಳಿಸಿದರು.