ಸುರಪುರ: ನಗರಸಭೆಗೆ ನೂತನ ಅಧ್ಯಕ್ಷರಾಗಿ 6ನೇ ವಾರ್ಡನ್ ದೋಬಿಮೊಹಲ್ಲಾ ಸದಸ್ಯೆ ಸುಜಾತಾ ವೇಣುಗೋಪಾಲ ಜೇವರ್ಗಿ ಹಾಗೂ ಉಪಾಧ್ಯಕ್ಷರಾಗಿ 11ನೇ ವಾರ್ಡಿನ ಶೆಟ್ಟಿ ಮೊಹಲ್ಲಾ ಸದಸ್ಯ ಮಹೇಶ್ ಎಸ್.ಎನ್. ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾದರು.
ಇಂದು ನಗರಸಭೆಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಜಾತಾ ವೇಣುಗೋಪಾಲ ಜೇವರ್ಗಿ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಮಹೇಶ್ ಪಾಟೀಲ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಸುರಪುರ ನಗರಸಭೆ ಬಿಜೆಪಿ ತೆಕ್ಕೆಗೆ: ಅಧ್ಯಕ್ಷರಾಗಿ ಸುಜಾತಾ ವೇಣುಗೋಪಾಲ ಜೇವರ್ಗಿ ನೇಮಕ ಚುನಾವಣಾ ಅಧಿಕಾರಿಯಾಗಿದ್ದ ಯಾದಗಿರಿ ಜಿಲ್ಲೆಯ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಅವರು, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು. ಅಧ್ಯಕ್ಷ- ಉಪಾಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ರಾಯಚೂರು ಲೋಕಸಭೆ ಸಂಸದರಾದ ಅಮರೇಶ ನಾಯಕ ಅವರು, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ(ರಾಜುಗೌಡ), ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಾ ಹನಮಪ್ಪ ನಾಯಕ, ರಾಜಾ ಪಾಮ ನಾಯಕ, ಅಮರಣ್ಣ ಹುಡೇದ್, ಹೆಚ್ ಸಿ ಪಾಟೀಲ್, ಸುರೇಶ್ ಸಜ್ಜನ ಸೇರಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.