ಯಾದಗಿರಿ:ಕರ್ನಾಟಕ ರಾಜ್ಯದ ನೂತನ ಮಂತ್ರಿಗಳಾದ ಶ್ರೀರಾಮುಲು ಹಾಗೂ ಪ್ರಭು ಚವ್ಹಾಣ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಪರಿಶೀಲನಾ ಸಭೆ ನಡೆಯಿತು.
ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳ ಜೊತೆ ಶ್ರೀರಾಮುಲು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡದೇ ತಡವರಿಸಿದ ಹಿನ್ನೆಲೆ ನೂತನ ಸಚಿವರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನಾ ಸಭೆ ಜಿಲ್ಲಾ ಕೃಷಿ ಇಲಾಖೆಯಿಂದ ಹಾನಿಗೊಳಗಾದ ಜಮೀನುಗಳ ದಾಖಲಾತಿಗಳು ಹಾಗೂ ಪ್ರವಾಹದಿಂದ ಕೊಚ್ಚಿ ಹೋದ ಬೆಳೆ ಹಾನಿಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು ಜಿಲ್ಲಾಧಿಕಾರಿಗಳಿಗೆ ರೈತರಿಗೆ ಪರಿಹಾರ ನೀಡುವಂತೆ ಸೂಚಿಸಿದರು.
ಕೆಬಿಜೆಎನ್ಎಲ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಸಚಿವರು, ರೈತರು ಜಮೀನುಗಳಲ್ಲಿ ಬೆಳೆದ ಪೈರುಗಳು ಹಾಳಾಗುವುದಕ್ಕೆ ನೀವೇ ಕಾರಣ ಎಂದು ದೂರಿದರು. ನೀವು ಸರಿಯಾಗಿ ಕಾರ್ಯನಿರ್ವಹಿಸದ ಪರಿಣಾಮ ರೈತರ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ನಷ್ಟವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಕೆಬಿಜೆಎನ್ಎಲ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.