ವಿಶ್ವ ಆರೋಗ್ಯ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಬಾರಿ ನಮ್ಮ ಗ್ರಹ, ನಮ್ಮ ಆರೋಗ್ಯ ಎಂಬ ಘೋಷವಾಕ್ಯವನ್ನು ಇಟ್ಟುಕೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳು ಜಗತ್ತನ್ನು ಬಾಧಿಸುತ್ತಿರುವ ಈ ವೇಳೆ ಮಾನವರು ಮತ್ತು ಗ್ರಹವನ್ನು ಆರೋಗ್ಯವಾಗಿಡುವ ಸಲುವಾಗಿ ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಪ್ರತಿ ವರ್ಷ ಪ್ರಪಂಚದಾದ್ಯಂತ 13 ಮಿಲಿಯನ್ಗೂ ಹೆಚ್ಚು ಮಂದಿ ಪರಿಸರದ ಕಾರಣಗಳಿಂದಾಗಿ ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ.
ವಿಶ್ವ ಆರೋಗ್ಯ ದಿನದ ಇತಿಹಾಸ:ವಿಶ್ವಸಂಸ್ಥೆಯಲ್ಲಿ ಡಿಸೆಂಬರ್ 1945ರಲ್ಲಿ ಬ್ರೆಜಿಲ್ ಮತ್ತು ಚೀನಾ ದೇಶಗಳು ಆರೋಗ್ಯಕ್ಕೆ ಸಂಬಂಧಿಸಿದಂತೆ ಎಲ್ಲವನ್ನೂ ಒಳಗೊಳ್ಳುವ ಸ್ವತಂತ್ರ ಮತ್ತು ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯ ರಚನೆ ಮಾಡಬೇಕೆಂದು ಪ್ರಸ್ತಾಪ ಮಾಡಿದವು. ಜುಲೈ 1946ರಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಗಿದ್ದು, 7 ಏಪ್ರಿಲ್ 1948ರಂದು 61 ದೇಶಗಳು ಈ ವಿಶ್ವ ಆರೋಗ್ಯ ಸಂಸ್ಥೆಯ ರಚನೆಯ ಒಪ್ಪಂದಕ್ಕೆ ಸಹಿ ಹಾಕಿದವು. ಈ ದಿನವನ್ನು ಮೊದಲ ಬಾರಿಗೆ ವಿಶ್ವ ಆರೋಗ್ಯ ದಿನವನ್ನಾಗಿ 1949ರಲ್ಲಿ ಜುಲೈ 22ರಂದು ಆಚರಣೆ ಮಾಡಲಾಯಿತು. ನಂತರ ಏಪ್ರಿಲ್ 7ಕ್ಕೆ ವಿಶ್ವ ಆರೋಗ್ಯ ದಿನವನ್ನಾಗಿ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು.
ವಿಶ್ವ ಆರೋಗ್ಯ ಸಂಸ್ಥೆಯ ರಚನೆಯ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಿದ ದಿನವನ್ನೇ ವಿಶ್ವ ಆರೋಗ್ಯ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. 1950ರಿಂದ ವಿಶ್ವ ಆರೋಗ್ಯ ದಿನವನ್ನು ಏಪ್ರಿಲ್ 7ರಂದು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಈ ದಿನವನ್ನು ಆಚರಣೆ ಮಾಡಬೇಕಾದರೆ ಒಂದೊಂದು ಘೋಷವಾಕ್ಯವನ್ನು ಇಟ್ಟುಕೊಳ್ಳಲಾಗುತ್ತದೆ. 2021ರಲ್ಲಿ 'ಪ್ರತಿಯೊಬ್ಬರಿಗೂ ಉತ್ತಮ ಮತ್ತು ಆರೋಗ್ಯಕರ ಜಗತ್ತನ್ನು ನಿರ್ಮಿಸುವುದು' ಎಂಬ ಘೋಷವಾಕ್ಯವನ್ನು ಇಟ್ಟುಕೊಳ್ಳಲಾಗಿತ್ತು. ಈಗ 'ನಮ್ಮ ಗ್ರಹ, ನಮ್ಮ ಆರೋಗ್ಯ' ಎಂಬ ಘೋಷವಾಕ್ಯವನ್ನು ಇಟ್ಟುಕೊಳ್ಳಲಾಗಿದೆ.