ಕಾವೇರಿ: ಕೆಆರ್ಎಸ್ಗೆ ಮುತ್ತಿಗೆ ಯತ್ನ; ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
Published : Oct 5, 2023, 9:25 PM IST
ಮಂಡ್ಯ :ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದ್ದು, ಇಂದು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕೆಆರ್ಎಸ್ಗೆ ಮುತ್ತಿಗೆ ಹಾಕಲು ಯತ್ನ ನಡೆಯಿತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ವಾಹನಕ್ಕೆ ಹತ್ತಿಸುವ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್, "ರಾಜ್ಯ ಸರ್ಕಾರ ಪೊಲೀಸರ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕಾವೇರಿ ನೀರಿಗಾಗಿ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಕಾವೇರಿ ನಮ್ಮದು, ಹೋರಾಟ ನಿರಂತರವಾಗಿ ನಡೆಯುತ್ತದೆ" ಎಂದು ಹೇಳಿದರು.
ಇದಕ್ಕೂ ಮುನ್ನ, ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದವು. ಈ ರ್ಯಾಲಿಯಲ್ಲಿ ನೂರಾರು ವಾಹನಗಳು ಭಾಗಿಯಾಗಿದ್ದವು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಕೆಆರ್ಎಸ್ಗೆ ಮುತ್ತಿಗೆ ಹಾಕುವ ಮೂಲಕ ಸರ್ಕಾರ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಎಚ್ಚರಿಕೆ ನೀಡಲು ಸಂಘಟನೆಗಳು ಮುಂದಾಗಿದ್ದವು.
ಇದನ್ನೂ ಓದಿ:ನಿಲ್ಲದ ಕಾವೇರಿ ಕಿಚ್ಚು : ಕೆಆರ್ಎಸ್ ಡ್ಯಾಂ ಮುತ್ತಿಗೆಗೆ ಹೊರಟ ಕನ್ನಡಪರ ಸಂಘಟನೆಗಳು