ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರದ ಅಗತ್ಯವಿದೆ: ಕೇಂದ್ರ ಸಚಿವ ವಿ.ಕೆ.ಸಿಂಗ್
ಬಾಗಲಕೋಟೆ: "ಯಾವುದೇ ಪ್ರದೇಶದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರದ ಆಗತ್ಯವಿದೆ. ಕೇಂದ್ರ ಸರ್ಕಾರ ಪ್ರತಿ ಜಾತಿ, ಸಮುದಾಯ ಹಾಗೂ ಇಲಾಖೆಗಳ ಅಭಿವೃದ್ಧಿ ಮಾಡುತ್ತಿದೆ" ಎಂದು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮತ್ತು ನಾಗರಿಕ ವಿಮಾನಯಾನ ಸಚಿವ ವಿ.ಕೆ.ಸಿಂಗ್ ಹೇಳಿದರು. ಇಲ್ಲಿಯ ಬವಿವ ಸಂಘದ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಜಯ ಸಂಕಲ್ಪ ಯಾತ್ರೆ ಸಮಾವೇಶಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.
"ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಮಾಜದ ತಳಮಟ್ಟದ, ಬಡವರ ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಸದೃಢವಾಗಿಸುವ ಕಾರ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸರ್ಕಾರ ನೋಡಿದ್ದೇವೆ, ಅವರು ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಅನ್ನೋದು ನಮಗೆ ಗೊತ್ತಿದೆ. ಅವರು ದೇಶದ ಹೊರಗೆ ಹೋಗಿ ದೇಶದ ವಿರುದ್ಧ ಮಾತನಾಡುವ ಕೆಲಸವನ್ನೂ ಮಾಡುತ್ತಿದ್ದಾರೆ. ಆದ್ದರಿಂದ ನೀವು ಯಾರು ಅಭಿವೃದ್ಧಿ ಮಾಡುತ್ತಾರೋ ಅಂತಹವರಿಗೆ ಬೆಂಬಲ ನೀಡಬೇಕು. ಅದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ಹಾಕುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಬೇಕು" ಎಂದು ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, "ಮುಂದೆ ಭಾರತ ಮುಕ್ತ ಕಾಂಗ್ರೆಸ್ ಆಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವ ಇಲ್ಲ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೆಲಕಚ್ಚಿದ್ದಾರೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ" ಎಂದರು.
ಇದನ್ನೂ ಓದಿ:ಪ್ರಣಾಳಿಕೆಯಲ್ಲಿ ಇಲ್ಲದ ಕೆಲಸವನ್ನೂ ಬಿಜೆಪಿ ಸರ್ಕಾರ ಮಾಡಿದೆ: ಸಿ ಟಿ ರವಿ