ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಕಾಂಗ್ರೆಸ್, ಕೆಆರ್ಎಸ್ ಕಾರ್ಯಕರ್ತರಿಂದ ಮುತ್ತಿಗೆ
ಬೆಂಗಳೂರು : ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಹಾಗೂ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ನಾಯಕರ ಬಗ್ಗೆ ಕಟೀಲ್ ಅವಹೇಳನಕಾರಿ ಹೇಳಿಕೆ ಕೊಟ್ಟಿರುವುದನ್ನು ವಿರೋಧಿಸಿ ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ, ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ನಳಿನ್ ಕುಮಾರ್ ಕಟೀಲ್ಗೆ ಧಿಕ್ಕಾರ ಎಂದು ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಚೇರಿ ಎದುರು ಘೋಷಣೆ ಹಾಕಿದರು. ಕಾಂಗ್ರೆಸ್ ಮುಖಂಡ ಮನೋಹರ ನೇತೃತ್ವದಲ್ಲಿ ಮುತ್ತಿಗೆಗೆ ಯತ್ನ ನಡೆಸಿದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಕೆಆರ್ಎಸ್ ಪಕ್ಷದಿಂದ ಮುತ್ತಿಗೆ ಯತ್ನ : ಇದೇ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು. ಏಕಾಏಕಿಯಾಗಿ ಬಿಜೆಪಿ ಕಚೇರಿಗೆ ಆಗಮಿಸಿದ ಕೆಆರ್ಎಸ್ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಲೋಕಾಯುಕ್ತ ಟ್ರ್ಯಾಪ್‌ನಲ್ಲಿ ಸಿಲುಕಿರುವ ಮಾಡಾಳ್ ಪುತ್ರ ಪ್ರಕರಣದಲ್ಲಿ ಶಾಸಕ ಮಾಡಾಲ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ :ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ: ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಮೊಟ್ಟೆ ಎಸೆತ