ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ: ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಮೊಟ್ಟೆ ಎಸೆತ - ಈಟಿವಿ ಭಾರತ ಕನ್ನಡ ನ್ಯೂಸ್
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಸ್ಪೋಟಗೊಂಡಿದೆ. ಕೈ ಕಾರ್ಯಕರ್ತರು ಹಾಗೂ ಜಿಲ್ಲಾಧ್ಯಕ್ಷರ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಅವರ ಕಾರಿನ ಮೇಲೆ ಕೆ.ಆರ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಸುದ್ದಿಯಾಗಿತ್ತು. ಈ ಬಗ್ಗೆ ಕೆಆರ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ಹೊರ ಹಾಕಿದ್ದಾರೆ.
ಜೊತೆಗೆ ಸಚಿವ ನಾರಾಯಣಗೌಡ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡರೇ ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಕಾಂಗ್ರೆಸ್ ಮುಖಂಡರು ಆಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ ಎಂದು ತಿಳಿದು ಬಂದಿದೆ
ಇದನ್ನೂ ಓದಿ :40ವರ್ಷ ಕಳೆದರೂ ಈಡೇರದ 1ಕಿ.ಮೀ ರಸ್ತೆಯ ಕನಸು, ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ