ತಮಿಳುನಾಡಿಗೆ ನೀರು ಹರಿಸದಂತೆ ಹೆದ್ದಾರಿ ಬಂದ್ ಮಾಡಿ ರೈತ ಸಂಘದಿಂದ ಪ್ರತಿಭಟನೆ
ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ ಮೈಸೂರು - ಟಿ.ನರಸೀಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದವು. ಈ ವೇಳೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರೈತರು ಮೈಸೂರು- ಟಿ.ನರಸೀಪುರ ರಾಷ್ಟ್ರೀಯ ಹೆದ್ದಾರಿಯ ಬಿಂದಿಗೆ ಫ್ಯಾಕ್ಟರಿ ಬಳಿ ರಸ್ತೆ ತಡೆ ನಡೆಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರವು ರಾಜ್ಯದ ರೈತರ ಹಿತರಕ್ಷಣೆ ಕಾಪಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ರಾಜ್ಯ ರೈತ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಕಿರಗಸೂರು ಶಂಕರ್ ಹಾಗೂ ಕುರುಬೂರು ಸಿದ್ದೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು.
ಇದನ್ನೂ ಓದಿ :ಮಳೆಗಾಲದಲ್ಲಿ ರೈತರ ನಿದ್ದೆ ಕದ್ದ ಬೆಣ್ಣೆಹಳ್ಳ: ಶಾಶ್ವತ ಪರಿಹಾರಕ್ಕೆ ಮತ್ತೊಂದು ಹೋರಾಟಕ್ಕೆ ಸಿದ್ಧವಾದ ರೈತ ಸಮುದಾಯ