ಖಾನಾಪುರ ಕೆನರಾ ಬ್ಯಾಂಕ್ಗೆ ಬೆಂಕಿ: ಕಡತ, ಪಿಠೋಪಕರಣಗಳು ಸುಟ್ಟು ಭಸ್ಮ - Fire incident in Canara Bank
Published : Nov 18, 2023, 1:42 PM IST
ಬೆಳಗಾವಿ:ಜಿಲ್ಲೆಯ ಖಾನಾಪುರ ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಕಡತಗಳು, ಪಿಠೋಪಕರಣಗಳು ಸುಟ್ಟು ಕರಕಲಾಗಿವೆ. ಖಾನಾಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಶನಿವಾರ ಆಕಸ್ಮಿಕವಾಗಿ ಈ ಬೆಂಕಿ ತಗುಲಿದೆ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರು ಈ ಬೆಂಕಿ ಅವಘಡವನ್ನು ಕಂಡಿದ್ದು, ಕೂಡಲೇ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆ ಬಗ್ಗೆ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ, ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬ್ಯಾಂಕ್ ಶಾಖೆಯಲ್ಲಿದ್ದ ಕೆಲವು ಕಡತ ಹಾಗೂ ಪಿಠೋಪಕರಣಗಳು ಬೆಂಕಿಗಾಹುತಿಯಾಗಿದ್ದವು. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.